ಪರಿಸರದ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ
ಬೆಂಗಳೂರು, ಅ. 8: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ‘ಸುವರ್ಣ ಮಹೋತ್ಸವ’ದ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಹಾಗೂ ಪರಿಸರದ ಬಗ್ಗೆ ಯುವಜನರಲ್ಲಿ ಅರಿವು ಮೂಡಿಸಲು ‘ಪರಿಸರದ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ’ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಮಂಡಳಿ ಅಧ್ಯಕ್ಷರೂ ಆಗಿರುವ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದ್ದಾರೆ.
ಬುಧವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯದಲ್ಲಿ ಅ.10 ರಿಂದ ನ.19ರ ವರಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರತಿ ಹಳ್ಳಿ, ತಾಲೂಕು ಹಾಗೂ ಪಟ್ಟಣ ಪ್ರದೇಶಗಳಲ್ಲಿಯೂ ಪರಿಸರದ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.
ಪರಿಸರ ಕಾಳಜಿ, ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಉತ್ತಮ ರೀಲ್ಸ್ ಮಾಡುವವರಿಗೆ 50 ಸಾವಿರ ರೂ. ಪ್ರಥಮ, 25ಸಾವಿರ ರೂ.ದ್ವಿತೀಯ ಹಾಗೂ 10 ಸಾವಿರ ರೂಪಾಯಿ ತೃತೀಯ ಬಹುಮಾನ ನೀಡಲಾಗುವುದು. ಅ.10ಕ್ಕೆ ಬಳ್ಳಾರಿಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ನ.19ರಂದು ಬೆಂಗಳೂರಿನಲ್ಲಿ ಬೃಹತ್ ಸಮಾರಂಭದೊಂದಿಗೆ ಮುಕ್ತಾಯವಾಗಲಿದೆ ಎಂದು ನರೇಂದ್ರಸ್ವಾಮಿ ತಿಳಿಸಿದರು.
ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಯಾಗಲು ಮೂಲ ಕಾರಣಕರ್ತರಾದ ಮಾಜಿ ಪ್ರಧಾನಿ ಇಂದಿರಾಗಾಂಧಿ ನೆನಪಿನಲ್ಲಿ ರಾಜ್ಯದ 15 ಭಾಗದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಎಲ್ಲ ಜಿಲ್ಲೆಗಳೂ ಒಳಗೊಳ್ಳುವಂತೆ ನೋಡಿಕೊಳ್ಳಲಾಗುವುದು. ಜಿಲ್ಲಾ ಮತ್ತು ತಾಲೂಕು ಮಟ್ಟ ಮಾತ್ರವಲ್ಲದೆ, ಪ್ರತಿ ಹಳ್ಳಿಯಲ್ಲೂ ಪರಿಸರ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದರು.
ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸಲು ಚಿತ್ರಕಲೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಕ್ಷೇತ್ರವಾರು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಜಿಲ್ಲಾಮಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 3ಸಾವಿರ ರೂ. ನಗದು ಬಹುಮಾನ ನೀಡಲಾಗುವುದು. ಪರಿಸರ ಉಳಿವು ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಶ್ರಮಿಸುವ ವ್ಯಕ್ತಿ ಮತ್ತು ಸಂಘ-ಸಂಸ್ಥೆಗಳಿಗೆ ಜಿಲ್ಲಾಮಟ್ಟದಲ್ಲಿ ‘ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು.ನ.18 ಮತ್ತು 19ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗುವುದು ಎಂದು ನರೇಂದ್ರಸ್ವಾಮಿ ಮಾಹಿತಿ ನೀಡಿದರು.
ಮಂಡಳಿಯ ಸಿಬ್ಬಂದಿ ಕೊರತೆಯಿಂದ ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಿಬ್ಬಂದಿ ಭರ್ತಿಗೆ ಕ್ರಮ ವಹಿಸಲಾಗಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ವಾಯು ಮತ್ತು ಜಲ ಮಾಲಿನ್ಯ ತಡೆಗಟ್ಟಲು ಮಂಡಳಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ. ನಾನು ಅಧಿಕಾರ ವಹಿಸಿಕೊಂಡ ಬಳಿಕ ಮಾಲಿನ್ಯಕ್ಕೆ ಕಾರಣವಾಗಿರುವ 152 ವಿವಿಧ ಸಂಸ್ಥೆಗಳನ್ನು ಮುಚ್ಚಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಸಲಹೆಗಾರರೂ ಆಗಿರುವ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಂಡಳಿಯ ಸದಸ್ಯ ಕಾರ್ಯದರ್ಶಿ ಲಿಂಗರಾಜು ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.