×
Ad

ಚಪ್ಪಲಿ ಎಸೆತ ಪ್ರಕರಣ | ಸಿದ್ದರಾಮಯ್ಯ ಮುಂದೆ ಪ್ರದೀಪ್ ಈಶ್ವರ್ ಕಣ್ಣೀರು: ‘ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ತಿಳಿಸಿದ್ದೇನೆ’

Update: 2026-06-30 15:11 IST

ಬೆಂಗಳೂರು : ಚಿಕ್ಕಬಳ್ಳಾಪುರ ಕೆಂಪೇಗೌಡ ಜಯಂತಿ ಆಚರಣೆ ಸಂದರ್ಭದಲ್ಲಿ ಚಪ್ಪಲಿ ಎಸೆತ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಘಟನೆಯ ಬಗ್ಗೆ ವಿವರಿಸುತ್ತಾ ಕಣ್ಣೀರು ಹಾಕಿದ್ದು, ಈ ವೇಳೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ತುರ್ತು ಕರೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ನಗರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರದಲ್ಲಿ ಕಳೆದ ಜೂ.27ರಂದು ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ವೇಳೆ, ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ತಮ್ಮ ಕಾರಿಗೆ ಚಪ್ಪಲಿ ಎಸೆದ ಘಟನೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟರು.

ಈ ವೇಳೆ ಪ್ರತಿಪಕ್ಷದ ಜೆಡಿಎಸ್, ಬಿಜೆಪಿ ಕಾರ್ಯಕರ್ತರು ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಬಗ್ಗೆ ಅವಹೇಳನಕಾರಿಯಾಗಿ ಪದ ಬಳಸಿ ನಿಂದನೆ ಮಾಡಿದ್ದಾರೆ ಎಂದು ಹೇಳುತ್ತಾ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಕಣ್ಣೀರಾದರು. ಆಗ ಶಾಸಕರನ್ನು ಸಂತೈಸಿದ ಸಿದ್ದರಾಮಯ್ಯ, ಕೂಡಲೇ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ದೂರವಾಣಿ ಕರೆ ಮಾಡಿ, ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ರಾಜಕಾರಣದಲ್ಲಿ ಈ ರೀತಿಯ ಘಟನೆಗಳು ಸಾಮಾನ್ಯ. ಇದನ್ನು ಎದುರಿಸಬೇಕು. ಇದರಿಂದ ಧೃತಿಗೆಡಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು. ಪೊಲೀಸರ ಸಮ್ಮುಖದಲ್ಲೇ ಅದರಲ್ಲೂ ಆಡಳಿತ ಪಕ್ಷದ ಶಾಸಕರಿಗೆ ಈ ರೀತಿ ಆಗಿರುವುದು ಸರಿಯಲ್ಲ. ಸಂಬಂಧಪಟ್ಟ ಸ್ಥಳೀಯ ಅಧಿಕಾರಿಯ ವಿರುದ್ಧ ಕ್ರಮ ಜರಗಿಸಬೇಕು ಎಂದೂ ಸಿದ್ದರಾಮಯ್ಯ ತಿಳಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವ ಮಧು ಬಂಗಾರಪ್ಪ ಸೇರಿದಂತೆ ಪ್ರಮುಖರಿದ್ದರು.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News