×
Ad

ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಮಸೂದೆಯನ್ನು ರಾಷ್ಟ್ರಪತಿಗೆ ರವಾನಿಸಿದ ರಾಜ್ಯಪಾಲರು?

Update: 2025-04-17 00:32 IST

ಥಾವರ್‌ಚಂದ್ ಗೆಹ್ಲೋಟ್ 

ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, ರಾಜ್ಯಪಾಲರು ಇಂದು(ಬುಧವಾರ) ಈ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಗಾಗಿ ಕಾಯ್ದಿರಿಸಿದ್ದಾರೆ.

"ಸಂವಿಧಾನವು ಧರ್ಮದ ಆಧಾರದ ಮೇಲೆ ಮೀಸಲಾತಿಗೆ ಅವಕಾಶ ನೀಡುವುದಿಲ್ಲ. ಮುಸ್ಲಿಮರು ಮಾತ್ರ ಇರುವ ಪ್ರವರ್ಗ 2(ಬಿ)ಗೆ ಶೇ.4ರಷ್ಟು ಮೀಸಲಾತಿ ನೀಡಿರುವುದನ್ನು ‘ಧರ್ಮ ಆಧರಿಸಿ ಸಮುದಾಯಕ್ಕೆ ನೀಡಿದ ಮೀಸಲಾತಿʼ ಎಂದು ಅರ್ಥೈಸಿಕೊಳ್ಳಬಹುದು" ಎಂದು ರಾಜಭವನವು ಹೇಳಿಕೆಯಲ್ಲಿ ತಿಳಿಸಿದೆ ಎನ್ನಲಾಗಿದೆ.

ಅಲ್ಲದೆ, ರಾಜ್ಯಪಾಲರು ತಮ್ಮ ವಿವೇಚನಾ ಅಧಿಕಾರವನ್ನು ಬಳಸಿಕೊಂಡು ರಾಷ್ಟ್ರಪತಿಗಳಿಗೆ ಈ ಮಸೂದೆಯನ್ನು ಕಳುಹಿಸುತ್ತಿರುವುದಾಗಿ ಹೇಳಿದ್ದಾರೆ.

ಸರಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡುವ ಉದ್ದೇಶವನ್ನು ಹೊಂದಿರುವ  ವಿಧೇಯಕವನ್ನು ಮಾರ್ಚ್‌ನಲ್ಲಿ ನಡೆದ ಅಧಿವೇಶನದಲ್ಲಿ ಉಭಯ ಸದನ ಅಂಗೀಕರಿಸಿತ್ತು. ರಾಜ್ಯದ ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಈ ವಿಧೇಯಕವನ್ನು ತೀವ್ರವಾಗಿ ವಿರೋಧಿಸಿತ್ತು.

ಅಲ್ಲದೆ, ಉಭಯ ಸದನಗಳಲ್ಲೂ ವಿಧೇಯಕ ಅಂಗೀಕರವಾಗಿದ್ದರೂ, ಈ ವಿಧೇಯಕವನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ ಮಾಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News