×
Ad

ಬಂಕಾಪುರಧಾಮದಲ್ಲಿ 5 ಮರಿಗಳಿಗೆ ಜನ್ಮ ನೀಡಿದ ಮತ್ತೊಂದು ತೋಳ

Update: 2025-02-14 23:25 IST

ಬೆಂಗಳೂರು : ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಮತ್ತೊಂದು ತೋಳ ಐದು ಮರಿಗಳಿಗೆ ಜನ್ಮ ನೀಡಿದ್ದು, ಸಂರಕ್ಷಿತ ತೋಳ ಧಾಮದಲ್ಲಿ ಅಳಿವಿನಂಚಿನಲ್ಲಿರುವ ಬೂದು ತೋಳ (ಇಂಡಿಯನ್ ಗ್ರೇ ಉಲ್ಫ್)ದ ಸಂತತಿಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಮಾಧ್ಯಮ ಹೇಳಿಕೆ ನೀಡಿರುವ ಅವರು, ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿರುವ ಸುಮಾರು 332 ಹೆಕ್ಟರ್ ಬಂಕಾಪೂರ ತೋಳ ಧಾಮದ ಸಂರಕ್ಷಣೆಗೆ ಅರಣ್ಯ ಇಲಾಖೆ ಕಾಳಜಿ ವಹಿಸಿದ್ದು, ಇದು ವನ್ಯಜೀವಿಗಳಿಗೆ ಸುರಕ್ಷಿತ ತಾಣವಾಗಿದೆ. ತೋಳಗಳ ಸಂತತಿಯಲ್ಲಿ ಹೆಚ್ಚಳಕ್ಕೂ ಇದೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ತಿಂಗಳು ಇದೇ ಕುರುಚಲು ಕಾಡಿನಲ್ಲಿ ತೋಳವೊಂದು 8 ಮರಿಗಳಿಗೆ ಜನ್ಮ ನೀಡಿತ್ತು, ಈಗ ಮತ್ತೊಂದು ತೋಳ ಐದು ಮರಿಗೆ ಜನ್ಮಕೊಟ್ಟಿದೆ. ನೈಸರ್ಗಿಕ ಗುಹೆಗಳು, ಬೆಟ್ಟ ಗುಡ್ಡಗಳನ್ನೂ ಹೊಂದಿರುವ ಈ ಧಾಮದಲ್ಲಿ, ತೋಳ, ಚಿರತೆ, ನವಿಲು, ಕತ್ತೆಕಿರುಬ, ನರಿ, ಮೊಲ, ಮುಳ್ಳುಹಂದಿ ಸೇರಿದಂತೆ ಇನ್ನಿತರ ಹಲವು ವನ್ಯಜೀವಿಗಳಿವೆ. ಕಳ್ಳಬೇಟೆ ತಡೆಗೂ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಸಕ್ತ ಈ ಕಾಡಿನಲ್ಲಿ ಬೂದು ತೋಳಗಳ ಸಂಖ್ಯೆ 40-45ಕ್ಕೆ ಹೆಚ್ಚಳವಾಗಿದೆ. ನವಜಾತ ತೋಳದ ಮರಿಗಳಿಗೆ ಯಾವುದೆ ಬಗೆಯ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ಗುಹೆಗಳ ಬಳಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News