×
Ad

ನ.14ಕ್ಕೆ ರಾಜ್ಯಾದ್ಯಂತ ಮೆಗಾ ಪೋಷಕರ-ಶಿಕ್ಷಕರ ಸಭೆ : ಮಧು ಬಂಗಾರಪ್ಪ

Update: 2025-11-01 19:05 IST

ಬೆಂಗಳೂರು : ರಾಜ್ಯದ ಎಲ್ಲ ಸರಕಾರಿ ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಕ್ಕಳ ಹಿತದೃಷ್ಟಿಯಿಂದ ನ.14ರಂದು ಮಕ್ಕಳ ದಿನಾಚರಣೆ ಅಂಗವಾಗಿ ಮೆಗಾ ಪೋಷಕರ-ಶಿಕ್ಷಕರ ಸಭೆಯನ್ನು ಏಕಕಾಲಕ್ಕೆ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶನಿವಾರ ನಗರದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಏರ್ಪಡಿಸಿದ್ದ 70ನೆ ಕರ್ನಾಟಕ ರಾಜ್ಯೋತ್ಸವ ಸಮಾರಂಭ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ಸರಕಾರಿ ಶಾಲಾ ಮಕ್ಕಳ ಕಲಿಕೆಯನ್ನು ಮತ್ತಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ನ.14ರಂದು ರಾಜ್ಯಾದ್ಯಂತ ಮೆಗಾ ಪೋಷಕರ-ಶಿಕ್ಷಕರ ಸಭೆ ನಡೆಯಲಿದೆ ಎಂದು ಹೇಳಿದರು.

ರಾಜ್ಯ ಸರಕಾರ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು 51,000 ಅತಿಥಿ ಶಿಕ್ಷಕರನ್ನು ಒಂದೇ ಬಾರಿಗೆ ನೇಮಕ ಮಾಡಿಕೊಳ್ಳಲಾಗಿದೆ. ಅತಿಥಿ ಶಿಕ್ಷಕರ ಗೌರವ ಧನವನ್ನು 2 ಸಾವಿರ ರೂ. ಹೆಚ್ಚಿಸಿದೆ. 2024-25ನೆ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೂರು ಪರೀಕ್ಷಾ ಮಾದರಿಯನ್ನು ಪರಿಚಯಿಸಿದ್ದರಿಂದ ಶೇ.79.71ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪಿಯುಸಿಯಲ್ಲಿ ಶೇ.85.19ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶಾಲಾ ಕೊಠಡಿಗಳು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು 850 ಕೋಟಿಗಳ ಕಾಮಗಾರಿಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ ಎಂದು ಅವರು ವಿವರಿಸಿದರು.

2026-27ನೆ ಶೈಕ್ಷಣಿಕ ಸಾಲಿನಿಂದ ಬೆಳಗಾವಿ ಜಿಲ್ಲೆಯ ಗಡಿಭಾಗದ ಗ್ರಾಮಗಳಲ್ಲಿ 7 ಸರಕಾರಿ ಶಾಲೆಗಳ ಆವರಣದಲ್ಲಿ ಹೆಚ್ಚುವರಿಯಾಗಿ ಕನ್ನಡ ಮಾಧ್ಯಮ ವಿಭಾಗಗಳನ್ನು ಪ್ರಾರಂಭಿಸಲು ಹಾಗೂ 2 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳಾಗಿ ಉನ್ನತೀಕರಿಸಲು ಅನುಮತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಇತರೆ ಗಡಿಭಾಗಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳಗೆ ಸಂಪೂರ್ಣ ಆದ್ಯತೆ ನೀಡಲಾಗುವುದು ಎಂದರು.

ಸಮಾರಂಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್ ಅವರು ಗಣ್ಯರನ್ನು ಸ್ವಾಗತಿಸಿದರು. ಇಲಾಖೆಯ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News