ಬೆಂಗಳೂರು : ಇಡೀ ಬೆಂಗಳೂರು ನಗರದ ಅಭಿವೃದ್ಧಿಗೆ 1.50 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ. ಮೇಲ್ಸೇತುವೆಗಳು, ಮೆಟ್ರೋ, ಬೆಂಗಳೂರು ಬಿಜಿನೆಸ್ ಕಾರಿಡಾರ್, ಟನಲ್ ರಸ್ತೆ, ಸಬ್ ಅರ್ಬನ್ ರೈಲ್ವೆ, ಕುಡಿಯುವ ನೀರು ಪೂರೈಕೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಇದರಲ್ಲಿ ಸೇರಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬುಧವಾರ ನಗರದ ವಿವಿಧ ಭಾಗಗಳಲ್ಲಿ ಸುಮಾರು 522.23 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿದ್ದ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳನ್ನು ನೆರವೇರಿಸಿ ಮಾತನಾಡಿದ ಅವರು, ಜನರ ಅಭಿವೃದ್ಧಿಗೆ ಉತ್ತಮ ಆಡಳಿತ ನೀಡಲು ಸರಕಾರ ಬದ್ಧವಾಗಿದೆ. ಟೀಕೆಗಳನ್ನು ಹಾಗೂ ಸಲಹೆಗಳನ್ನು ಸ್ವೀಕರಿಸಲು ನಾವು ಸಿದ್ದ ಎಂದರು.

ಬೆಂಗಳೂರಿನ ಉತ್ತರ ಭಾಗದಿಂದ ವಿಮಾನ ನಿಲ್ದಾಣಕ್ಕೆ ತೆರಳುವ ವಾಹನ ಸವಾರರ ಸಂಚಾರ ದಟ್ಟಣೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಹೆಬ್ಬಾಳ ಮಾದರಿಯಲ್ಲಿ ಹೊಸ ಮೇಲ್ಸೇತುವೆ ನಿರ್ಮಿಸುವ ಕುರಿತು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಜಕ್ಕೂರು ವಿಮಾನ ನಿಲ್ದಾಣದ ಎದುರೇ ನೂತನ ಪಾಲಿಕೆ ಕಚೇರಿ ನಿರ್ಮಾಣ ಮಾಡಲಾಗುವುದು ಎಂದು ಅವರು ತಿಳಿಸಿದರು.

ವಿಮಾನ ನಿಲ್ದಾಣ ಕಡೆಗೆ ಹೋಗುವವರು ಹಾಗೂ ಉತ್ತರ ಬೆಂಗಳೂರಿನಿಂದ ನಗರದೊಳಗೆ ಬರುವವರು ಪ್ರತಿನಿತ್ಯ ಸಂಚಾರ ದಟ್ಟಣೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಸುಮಾರು 20 ಕಿ.ಮೀ. ವ್ಯಾಪ್ತಿಯಲ್ಲಿ ಈ ಸಮಸ್ಯೆ ಇದೆ. ವಿಮಾನ ನಿಲ್ದಾಣಕ್ಕೆ ತೆರಳಲು ಈಗಿರುವ ಮಾರ್ಗವನ್ನೇ ಎಲ್ಲರೂ ಅವಲಂಬಿಸಬೇಕಾಗಿದೆ. ಹೀಗಾಗಿ ಇಲ್ಲಿ ಹೊಸ ಮೇಲೇತುವೆ ನಿರ್ಮಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಬೆಂಗಳೂರಿನ ನಾಗರಿಕರ ಸಮಯವನ್ನು ಉಳಿಸಬೇಕೆಂಬ ಉದ್ದೇಶದಿಂದ ಹಲವಾರು ಮೂಲಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದೇವೆ. ಈ ರೋಟರಿ ಮೇಲ್ಸೇತುವೆ ಬೆಂಗಳೂರಿಗೆ ಕಿರೀಟವಾಗಲಿದೆ. ಆರು ಪಥಗಳ ಮೇಲ್ಸೆತುವೆ ಸುಲಭದ ಕೆಲಸವಲ್ಲ. ಆದ್ಯತೆ ಮೇರೆಗೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದರು.

20 ಅಡಿ ಜಾಗದ ತಾಂತ್ರಿಕ ಸಮಸ್ಯೆಗೆ ಪರಿಹಾರ: ಗೆದ್ದಲಹಳ್ಳಿ ರೈಲ್ವೆ ಹಳಿಗೆ ಅಡ್ಡಲಾಗಿ ಮಳೆನೀರು ಕಾಲುವೆ ನಿರ್ಮಿಸುವುದು ತಾಂತ್ರಿಕವಾಗಿ ಸವಾಲಿನ ಕೆಲಸವಾಗಿತ್ತು. ಈ ಹಿಂದೆ ಮೂರು ಬಾರಿ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲನೆ ಮಾಡಲಾಗಿತ್ತು. ರೈಲ್ವೆ ಸೇತುವೆ ಹಾಗೂ ಇತರ ನಿರ್ಮಾಣಗಳ ನಡುವೆ ನೀರು ಹರಿಯಲು ಸೂಕ್ತ ವ್ಯವಸ್ಥೆ ಕಲ್ಪಿಸುವುದು ಸುಲಭದ ಕೆಲಸವಾಗಿರಲಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.

ಇದು ಬಹಳ ತಾಂತ್ರಿಕ ಸಮಸ್ಯೆ ಇದ್ದ ಜಾಗ. ಇಷ್ಟು ಅಗಲವಾದ ಪ್ರದೇಶದಲ್ಲಿ ಕೇವಲ 20 ಅಡಿ ಜಾಗದಲ್ಲಿ ಮಾತ್ರ ನೀರು ಹರಿದುಹೋಗಬೇಕಾದ ಪರಿಸ್ಥಿತಿ ಇತ್ತು. ಮಳೆ ಬಂದಾಗ ಹೆಬ್ಬಾಳ ಕಡೆಯಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತದೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಕಾಮಗಾರಿ ಕೈಗೊಳ್ಳಲಾಗಿದೆ. ಅಧಿಕಾರಿಗಳು ಈ ಸಮಸ್ಯೆಯನ್ನು ಪರಿಹರಿಸಿ ಕಾಮಗಾರಿ ಪೂರ್ಣಗೊಳಿಸಿರುವುದು ಸಂತಸದ ಸಂಗತಿ ಎಂದು ಅವರು ಹೇಳಿದರು.

ಸರಿಯಾದ ದಾಖಲೆಗಳಿದ್ದರೆ ಮನೆ ಬಾಗಿಲಿಗೆ ಖಾತಾ: ಬೆಂಗಳೂರಿನ ಜನತೆಗೆ 'ಭೂಮಿ ಗ್ಯಾರಂಟಿ' ನೀಡಲಾಗಿದೆ. ಇನ್ನು ಮುಂದೆ ಸರಿಯಾದ ದಾಖಲೆಗಳಿದ್ದರೆ ಖಾತಾ ಸಿದ್ಧ ಮಾಡಿ ಮನೆ ಬಾಗಿಲಿಗೆ ನೀಡುತ್ತಾರೆ. ಈಗಾಗಲೇ 26 ಲಕ್ಷ ಖಾತಾಗಳನ್ನು ಸಿದ್ಧಮಾಡಲಾಗಿದೆ. ಖಾತಾ ಅನ್ನು ಆನ್ ಲೈನ್ ಮೂಲಕ ಡೌನ್ ಲೋಡ್ ಕೂಡ ಮಾಡಿಕೊಳ್ಳಬಹುದು. 'ಬಿ' ಖಾತಾ ಹೊಂದಿರುವವರಿಗೆ 'ಎ' ಖಾತೆ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಬೀದಿ ಬದಿ ವ್ಯಾಪಾರಿಗಳನ್ನು ನಾವು ಹೊರಗೆ ತಳ್ಳುವುದಿಲ್ಲ. ಶಿಸ್ತಿನಿಂದ ಒಂದೆಡೆ ವ್ಯಾಪಾರ ಮಾಡಲಿ. ಮುಖ್ಯ ರಸ್ತೆಗಳಲ್ಲಿ ವಾಹನಗಳಿಗೆ ತೊಂದರೆಯಾಗುವುದು ಬೇಡ ಎನ್ನುವುದು ನಮ್ಮ ಭಾವನೆ. ಕೆಲವರು ಅದರ ಮೇಲೆ ರಾಜಕಾರಣ ಮಾಡುತ್ತಿದ್ದಾರೆ ಮಾಡುವವರು ಮಾಡಿಕೊಳ್ಳಲಿ ಎಂದು ಶಿವಕುಮಾರ್ ಹೇಳಿದರು.

ಕೃಷ್ಣ ಬೈರೇಗೌಡರು ತಮ್ಮ ಕ್ಷೇತ್ರದಲ್ಲಿ ಸಂಚಾರ ದಟ್ಟಣೆ ಹೆಚ್ಚಿದೆ ಎಂಬ ದೃಷ್ಟಿಯಿಂದ ಐದಾರು ಹೊಸ ದ್ವಿಪಥ ರಸ್ತೆಗಳನ್ನು ರೂಪಿಸಿದ್ದಾರೆ. ಅವರು ಬೆಂಗಳೂರು ನಗರದ ಜವಾಬ್ದಾರಿ ಹೊತ್ತ ನಂತರ ಬಹಳ ಕ್ಷಿಪ್ರವಾಗಿ ಎಲ್ಲ ಜನರಿಗೆ ಅನುಕೂಲ ಕಲ್ಪಿಸಬೇಕು ಎಂಬ ಉದ್ದೇಶದಿಂದ ನಗರಕ್ಕೆ ಹೊಸ ರೂಪ ನೀಡಲು ಕ್ರಮ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಬಿಎ, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿದ್ದೇವೆ: ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿಯಲ್ಲಿರುವ ನಗರ ಪಾಲಿಕೆಗಳ ಚುನಾವಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ. ಮತದಾರರ ಪಟ್ಟಿ ಬಗ್ಗೆ ತಕರಾರು ಇದೆ. ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಾವು ನಡೆಸಲಿದ್ದೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.

 

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೊದಲಿಗೆ ಬ್ಯಾಟರಾಯನಪುರದ ಜಕ್ಕೂರು ರೈಲ್ವೆ ಮೇಲ್ಸೇತುವೆ, ನಂತರ ಕೆ.ಆರ್.ಪುರಂನ ಗೆದ್ದಲಹಳ್ಳಿ ರೈಲ್ವೆ ಹಳಿಗೆ ಅಡ್ಡಲಾಗಿ ನಿರ್ಮಿಸಿರುವ ಮಳೆನೀರು ಕಾಲುವೆ ಉದ್ಘಾಟಿಸಿದರು. ಇದಾದ ಬಳಿಕ ಮಾರುತಿ ಸೇವಾನಗರ ಮುಖ್ಯರಸ್ತೆ ಐಒಸಿ ಜಂಕ್ಷನ್ ಬಳಿ ರೋಟರಿ ಮೇಲ್ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದರು ಹಾಗೂ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಅಮ್ಜದ್ ಖಾನ್ ಎಂ./ವಾರ್ತಾಭಾರತಿ

ಬೆಂಗಳೂರು ವರದಿಗಾರರು

ಅಮ್ಜದ್ ಖಾನ್ ಎಂ. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದು, 2007ರಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು‌, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.