ಇ-ಸ್ವತ್ತು ತೊಡಕು ನಿವಾರಣೆಗೆ ಪಂಚ ಸದಸ್ಯರ ಸಮಿತಿ ರಚನೆ : ಸಚಿವ ಈಶ್ವರ್ ಖಂಡ್ರೆ
ಕಾರ್ಯದರ್ಶಿ ನೇತೃತ್ವದಲ್ಲಿ 4 ಸಿಇಓಗಳ ಸಮಿತಿ ರಚಿಸಲು ಅಧಿಕಾರಿಗಳಿಗೆ ಸೂಚನೆ
ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು: ಇ-ಸ್ವತ್ತು ಪಡೆಯಲು ಗ್ರಾಮಸ್ಥರು ಪಂಚಾಯತ್ ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಮನೆಬಾಗಿಲಿಗೇ ಇ-ಸ್ವತ್ತು ಒದಗಿಸುವ ಮಹತ್ವದ ನಿರ್ಧಾರವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ಕೈಗೊಂಡಿದ್ದಾರೆ. ಇ-ಸ್ವತ್ತು ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಪಂಚ ಸದಸ್ಯರ ಸಮಿತಿ ರಚಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಗೆ ಲಿಖಿತ ನಿರ್ದೇಶನ ನೀಡಿರುವ ಸಚಿವರು, ತಂತ್ರಾಂಶ ಮತ್ತು ಸರ್ವರ್ ಸಮಸ್ಯೆಯಿಂದ ಸಾವಿರಾರು ಇ-ಸ್ವತ್ತು ಅರ್ಜಿಗಳು ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಕಾರ್ಯದರ್ಶಿ ಡಿ.ರಂದೀಪ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು, ಮಂಗಳೂರು, ಕಲಬುರಗಿ ಹಾಗೂ ಬೆಳಗಾವಿ ಜಿಲ್ಲೆಗಳ ಸಿಇಒಗಳನ್ನು ಒಳಗೊಂಡ ಸಮಿತಿ ರಚಿಸಿ, 10 ದಿನಗಳೊಳಗೆ ಅಗತ್ಯ ನಿಯಮ ಬದಲಾವಣೆಗಳ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಗ್ರಾಮಠಾಣಾ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿರುವ ಅನೇಕ ಕುಟುಂಬಗಳ ಬಳಿ ಸ್ವತ್ತಿನ ದಾಖಲೆಗಳಿಲ್ಲದ ಕಾರಣ ಇ-ಸ್ವತ್ತು ಪಡೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಬ್ಯಾಂಕ್ ಸಾಲ, ಮನೆ ದುರಸ್ತಿ, ಪುನರ್‌ನಿರ್ಮಾಣ, ಕಟ್ಟಡ ನಕ್ಷೆ ಅನುಮೋದನೆ ಹಾಗೂ ಸ್ವತ್ತು ಮಾರಾಟಕ್ಕೂ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮನೆಮನೆ ಸಮೀಕ್ಷೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಸೂಕ್ತ ಮಾರ್ಗೋಪಾಯ ಸೂಚಿಸುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.
ಇದೇ ವೇಳೆ, ಗ್ರಾಮಠಾಣಾ ವ್ಯಾಪ್ತಿಯ ಹೊರಗಿನ ಭೂಪರಿವರ್ತಿತ ಹಾಗೂ ಭೂಪರಿವರ್ತನೆ ಆಗದ ಕಂದಾಯ ಭೂಮಿಯಲ್ಲಿ ನಿರ್ಮಾಣಗೊಂಡಿರುವ ಬಡಾವಣೆಗಳು, ಕಟ್ಟಡಗಳು ಹಾಗೂ ಬಿ ಖರಾಬು ಮತ್ತು ಗೋಮಾಳ ಭೂಮಿಯನ್ನು ಒಳಗೊಂಡ ಪ್ರದೇಶಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನೂ ಪರಿಶೀಲಿಸಲಾಗುತ್ತಿದೆ. ಮೂಲಭೂತ ಸೌಲಭ್ಯಗಳನ್ನು ಗ್ರಾಮ ಪಂಚಾಯತಿಗಳು ಒದಗಿಸುತ್ತಿದ್ದರೂ ತೆರಿಗೆ ಸಂಗ್ರಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಎಲ್ಲ ಗ್ರಾಮೀಣ ಸ್ವತ್ತುಗಳಿಗೆ ಸುಗಮವಾಗಿ ಇ-ಸ್ವತ್ತು ಹಾಗೂ ಬಿ ಖಾತೆ ನೀಡುವ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದ್ದಾರೆ.