ಬೆಂಗಳೂರು : ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳೆ ಕೆಲ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಕ್ರಮವನ್ನು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿ ಇತ್ಯರ್ಥಪಡಿಸಿರುವ ಹೈಕೋರ್ಟ್, ರಾಜ್ಯಾದ್ಯಂತ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ಹಾಗೂ ಏಕರೂಪವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನಿರ್ದೇಶಿಸಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್‌ ಹಾಗೂ ನ್ಯಾಯಮೂರ್ತಿ ಕೆ.ಎಸ್‌. ಭರತ್‌ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂಬ ಕೆಇಎ ಪರ ವಕೀಲರ ಹೇಳಿಕೆ ದಾಖಲಿಸಿಕೊಂಡು ಅರ್ಜಿ ಇತ್ಯರ್ಥಪಡಿಸಿತು.

ರಾಜ್ಯಾದ್ಯಂತ ಪರೀಕ್ಷೆಗಳನ್ನು ಸಮರ್ಪಕವಾಗಿ ನಡೆಸಲು ಬೇಕಾದ ವ್ಯವಸ್ಥೆಗಳು ಏಕರೂಪವಾಗಿ ಇರುವಂತೆ ನೋಡಿಕೊಳ್ಳಲು ಕೆಇಎ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಂಡು ಸೂಚನೆಗಳನ್ನು ನೀಡಲಾಗುವುದು ಎಂಬ ಪ್ರಾಧಿಕಾರದ ಪರ ವಕೀಲರ ಹೇಳಿಕೆಯ ಹಿನ್ನೆಲೆಯಲ್ಲಿ, ಪ್ರಕರಣದಲ್ಲಿ ಮತ್ತಷ್ಟು ವಿಚಾರಣೆಗೆ ವಿಷಯ ಉಳಿದಿಲ್ಲ ಎಂದು ತಿಳಿಸಿತು.

ಅಂತಿಮವಾಗಿ ಕೆಇಎ ಹೇಳಿಕೆ ದಾಖಲಿಸಿಕೊಂಡು ಅರ್ಜಿ ಇತ್ಯರ್ಥಪಡಿಸಿದ ನ್ಯಾಯಾಲಯ, ರಾಜ್ಯದಾದ್ಯಂತ ಪರೀಕ್ಷೆಗಳನ್ನು ಸುವ್ಯವಸ್ಥಿತ ಮತ್ತು ಏಕರೂಪದ ರೀತಿಯಲ್ಲಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಉಪ ಅಧೀಕ್ಷಕರಿಗೆ ಅಗತ್ಯ ನಿರ್ದೇಶನ ನೀಡಬೇಕು ಎಂದು ಆದೇಶಿಸಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor