ಗೌರವ ಧನ ಹೆಚ್ಚಳ ಸಹಿತ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಧರಣಿ
ಬೆಂಗಳೂರು, ಆ.12: ಕನಿಷ್ಠ 10 ಸಾವಿರ ರೂ.ಮಾಸಿಕ ಗೌರವ ಧನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರದಿಂದ ಆಶಾ ಕಾರ್ಯಕರ್ತೆಯರು ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ಮಾತನಾಡಿ, ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವಂತೆ ಜನವರಿಯಲ್ಲಿ ಪ್ರತಿಭಟನೆ ನಡೆಸಿ, ಸರಕಾರಕ್ಕೆ ಆಗ್ರಹಿಸಲಾಗಿತ್ತು. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಪ್ರಿಲ್‌ನಿಂದ ಪ್ರತಿ ತಿಂಗಳು ಕನಿಷ್ಠ್ಠ 10 ಸಾವಿರ ರೂ. ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದರು. ಆದರೆ, ಈ ಬಗ್ಗೆ ಈವರೆಗೂ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಆರೋಪಿಸಿದರು.
ನಮ್ಮ ಎಲ್ಲ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರು ಧರಣಿ ನಡೆಸಲು ಮುಂದಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿರುವ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹಧನ ಸೇರಿಸಿ ಮಾಸಿಕ ಕನಿಷ್ಠ್ಠ 10 ಸಾವಿರ ರೂ.ಗಳನ್ನು ಈ ಎಪ್ರಿಲ್‌ನಿಂದ ಅನ್ವಯವಾಗುವಂತೆ ಆದೇಶ ನೀಡಬೇಕು. 2025 ಮಾರ್ಚ್‌ನಲ್ಲಿ ರಾಜ್ಯ ಬಜೆಟ್‌ನಲ್ಲಿ ಎಲ್ಲ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ 1 ಸಾವಿರ ರೂ. ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.
ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈಬಿಡಬೇಕು. ಹಾಗೂ ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು ಎಂದು ಒತ್ತಾಯಿಸಿದರು.
ಅವೈಜ್ಞಾನಿಕವಾಗಿ ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣಾ ಮೌಲ್ಯಮಾಪನವನ್ನು ಕೈಬಿಡಬೇಕು. ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳದ ಮಾದರಿಯಲ್ಲಿ ಇಡಿಗಂಟು ನೀಡಬೇಕು. ನಗರ ಪ್ರದೇಶಗಳ ಆಶಾ ಕಾರ್ಯಕರ್ತೆಯರಿಗೆ 2 ಸಾವಿರ ರೂ. ಗೌರವಧನ ಹೆಚ್ಚಿಸಬೇಕು. ಜೂನ್ - ಜುಲೈನಲ್ಲಿ ಕೇಂದ್ರ ಸರಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಧರಣಿಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಸೇರಿದಂತೆ ಅಪಾರ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.