ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಪ್ರಯತ್ನಗಳು ಪ್ರಜಾಪ್ರಭುತ್ವಕ್ಕೆ ಅಪಾಯ : ಎನ್.ಎ.ಹಾರಿಸ್
‘ವೋಟ್ ಬಚಾವೋ, ದೇಶ ಬಚಾವೋ’ ಜಾಗೃತಿ ಕಾರ್ಯಕ್ರಮ
ಬೆಂಗಳೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ದೇಶದ ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ‘ವೋಟ್ ಬಚಾವೋ, ದೇಶ ಬಚಾವೋ’ ಪ್ರತಿಭಟನೆಯ ಭಾಗವಾಗಿ, ಬೆಂಗಳೂರಿನ ಆಸ್ಟಿನ್ ಟೌನ್ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ.ಹಾರಿಸ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದೇಶಾದ್ಯಂತ ಕೇಳಿಬರುತ್ತಿರುವ ಮತಗಳ್ಳತನದ ಆರೋಪಗಳು, ಜನಾದೇಶವನ್ನು ತಿರುಚುವ ಪ್ರಯತ್ನಗಳು ಹಾಗೂ ಪ್ರಜಾಪ್ರಭುತ್ವದ ಸಾಂವಿಧಾನಿಕ ಮೌಲ್ಯಗಳಿಗೆ ಎದುರಾಗಿರುವ ಸವಾಲುಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಎನ್.ಎ.ಹಾರಿಸ್, ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕಿನ ಪಾವಿತ್ರ್ಯವನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಯಾವುದೇ ಪ್ರಯತ್ನಗಳು ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿಯಾಗಿವೆ ಎಂದು ತಿಳಿಸಿದರು.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಅನುಸರಿಸಲಾಗುತ್ತಿರುವ ಕ್ರಮಗಳು ಹಾಗೂ ಅವುಗಳಿಂದ ಮತದಾರರಿಗೆ ಎದುರಾಗಬಹುದಾದ ಸಮಸ್ಯೆಗಳ ಕುರಿತು ಅವರು ಕಳವಳ ವ್ಯಕ್ತಪಡಿಸಿದರು. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಹಾಗೂ ಚುನಾವಣಾ ಆಯೋಗದ ಉತ್ತರದಾಯಿತ್ವ ಅತ್ಯಂತ ಮುಖ್ಯ ಎಂದು ಒತ್ತಿಹೇಳಿದರು.
ಕಾರ್ಯಕ್ರಮದಲ್ಲಿ ‘ವೋಟ್ ಚೋರಿ ನಿಲ್ಲಿಸಿ’, ‘ಪ್ರಜಾಪ್ರಭುತ್ವ ಉಳಿಸಿ’, ‘ಸಂವಿಧಾನ ರಕ್ಷಿಸಿ’ ಎಂಬ ಘೋಷಣೆಗಳನ್ನು ಕೂಗುವ ಮೂಲಕ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಗೆ ಒಗ್ಗಟ್ಟಿನ ಸಂದೇಶ ಸಾರಲಾಯಿತು.
ದೇಶದ ಪ್ರತಿಯೊಬ್ಬ ನಾಗರಿಕನ ಮತಕ್ಕೂ ಸಮಾನ ಮೌಲ್ಯವಿದೆ. ಆ ಮತದಾನದ ಹಕ್ಕನ್ನು ರಕ್ಷಿಸುವುದು ಎಲ್ಲರ ಹೊಣೆಗಾರಿಕೆಯಾಗಿದೆ ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.