×
Ad

ಬೆಂಗಳೂರು ವಿವಿಯ ವಸತಿ ನಿಲಯದಲ್ಲಿ ದಲಿತ ವಿದ್ಯಾರ್ಥಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Update: 2025-02-03 21:26 IST

ಬೆಂಗಳೂರು : ಬೆಂಗಳೂರು ವಿಶ್ವ ವಿದ್ಯಾಲಯದ ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದ ದಲಿತ ವಿದ್ಯಾರ್ಥಿ ಎಚ್.ಎನ್. ಪಾವನಾ ಎಂಬಾಕೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸೂಕ್ತ ತನಿಖೆ ನಡೆಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಎಚ್.ಡಿ. ಕೋಟೆ ತಾಲೂಕಿನ ನಿವಾಸಿ ಆಗಿರುವ ಪಾವನಾ, ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ರಮಾಬಾಯಿ ಅಂಬೇಡ್ಕರ್ ಮಹಿಳಾ ವಸತಿ ನಿಲಯದಲ್ಲಿರುವ ತನ್ನ ಕೊಠಡಿಗೆ ಬಂದಿದ್ದು, ಆನಂತರ, ಮೃತಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಬೆಳಗ್ಗೆ ಕಾಲೇಜಿನ ಕಾರ್ಯಕ್ರಮವೊಂದಕ್ಕೆ ಹೋಗಿದ್ದ ಪಾವನಾ ಕಾರ್ಯಕ್ರಮ ನಡೆಯುವಾಗಲೇ ಅರ್ಧಕ್ಕೆ ಎದ್ದು ತನ್ನ ಕೊಠಡಿಗೆ ಬಂದಿದ್ದರು ಎನ್ನಲಾಗಿದೆ.

ಮಧ್ಯಾಹ್ನ ಸುಮಾರಿಗೆ ಇತರ ವಿದ್ಯಾರ್ಥಿನಿಯರು ಕೊಠಡಿಗೆ ಬಂದಾಗ ಪವಾನಾ ಮೃತಪಟ್ಟಿರುವ ಸ್ಥಿತಿಯಲ್ಲಿರುವುದು ಗೊತ್ತಾಗಿದೆ. ಸ್ಥಳಕ್ಕೆ ಆಗಮಿಸಿದ ಜ್ಞಾನಭಾರತಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಅಸಹಜ ಸಾವು ಪ್ರಕರಣ ದಾಖಲಿಸಿದ್ದಾರೆ.

ತನಿಖೆಯ ಬಳಿಕ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ. ಸದ್ಯ ಪಾವನಾ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನೆಯಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರವಾಗಲಿದೆ ಎಂದು ಜ್ಞಾನಭಾರತಿ ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News