×
Ad

ಬೆಂಗಳೂರು | ಬಾಣಂತಿ ಸಾವು : ವೈದ್ಯರ ನಿರ್ಲಕ್ಷ್ಯ ಆರೋಪ

Update: 2024-12-23 17:53 IST

 ಅನುಷಾ

ಬೆಂಗಳೂರು : ಇಲ್ಲಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣ ಎನ್ನುವ ಆರೋಪ ಕೇಳಿಬಂದಿದೆ.

ಮೃತ ಬಾಣಂತಿಯನ್ನು ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾ ಎಂದು ಗುರುತಿಸಲಾಗಿದೆ. ಒಂದು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಅನುಷಾ, ಅನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಅನುಷಾಗೆ ತರೀಕೆರೆಯ ರಾಜ್ ನರ್ಸಿಂಗ್‌ ಹೋಂನಲ್ಲಿ ಸಹಜ ಹೆರಿಗೆ ಆಗಿತ್ತು. ನಂತರ, ಸ್ಕ್ಯಾನಿಂಗ್ ಮಾಡಿದಾಗ ಕಲ್ಲು ಇದೆ ಎಂದು ವೈದ್ಯರು ತಿಳಿಸಿದ್ದರು. ಅದೇ ವರದಿ ಆಧಾರದ ಮೇಲೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ವೈದ್ಯರು ಅಲ್ಲಿಯೂ ಯಡವಟ್ಟು ಮಾಡಿದ್ದಾರೆಂದು ಕುಟುಂಬದವರು ಆರೋಪ ಮಾಡಿದ್ದಾರೆ.

ಶಸ್ತ್ರಚಿಕಿತ್ಸೆ ವೇಳೆ ಕರುಳಿಗೆ ಹಾನಿಯಾಗಿತ್ತು, ಆದರೆ, ಆ ವಿಚಾರವನ್ನು ವೈದ್ಯರು ಮುಚ್ಚಿಟ್ಟಿದ್ದಾರೆ. ಶಸ್ತ್ರಚಿಕಿತ್ಸೆ ನಂತರ ಮನೆಗೆ ತೆರಳಿದಾಗ ಬಾಣಂತಿಯ ಕೈ ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಹೀಗಾಗಿ ಆಕೆಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರಿಶೀಲಿಸಿದ ವೈದ್ಯರು, ಆರೋಗ್ಯ ಸಹಜವಾಗಿದೆ. ಏನೂ ಸಮಸ್ಯೆ ಇಲ್ಲ ಎಂದಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಹೀಗಾಗಿ ಮತ್ತೆ ಸ್ಥಳೀಯ ಆಸ್ಪತ್ರೆಗೆ ಅನುಷಾರನ್ನು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು, ಅನುಷಾಗೆ ಕಾಮಾಲೆ ಇದೆ ಎಂದಿದ್ದರು. ಸ್ಥಳೀಯ ಆಸ್ಪತ್ರೆ ವೈದ್ಯರ ಸಲಹೆಯಂತೆ ಅನುಷಾರನ್ನು ಕುಟುಂಬಸ್ಥರು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News