ಸಾಂದರ್ಭಿಕ ಚಿತ್ರ | PC : Image by rawpixel.com on Magnific

ಬೆಳಗಾವಿ : ದೇವಸ್ಥಾನದ ಪ್ರಸಾದ ಸೇವಿಸಿದ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶೇಲವ್ವಾ ದೇವಿ ದೇವಸ್ಥಾನದಲ್ಲಿ ವಿತರಿಸಲಾದ ಪ್ರಸಾದ ಸೇವಿಸಿದ ಭಕ್ತರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದ್ದು, ಆಹಾರ ವಿಷಬಾಧೆ ಶಂಕೆ ವ್ಯಕ್ತವಾಗಿದೆ. ಅಸ್ವಸ್ಥರನ್ನು ಕಬ್ಬೂರಿನ ಸರಕಾರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ ಬಳಿಕ ಏಕಾಏಕಿ ಹಲವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ವಾಂತಿ ಹಾಗೂ ಭೇದಿಯಿಂದ ಬಳಲುತ್ತಿದ್ದ ಭಕ್ತರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಶಾಸಕ ದುರ್ಯೋಧನ ಐಹೊಳೆ ಅವರು ಕಬ್ಬೂರಿನ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಸ್ಪತ್ರೆಗೆ ದಾಖಲಾಗಿದ್ದರೂ, ಕರ್ತವ್ಯದಲ್ಲಿರಬೇಕಾದ ತಾಲೂಕು ಆರೋಗ್ಯಾಧಿಕಾರಿ ಡಾ. ರಾಜಶೇಖರ ಖಣದಾಳೆ ಸ್ಥಳದಲ್ಲಿ ಹಾಜರಿರಲಿಲ್ಲ ಎನ್ನಲಾ ಗಿದೆ. ಇದರಿಂದ ಅಸಮಾಧಾನಗೊಂಡ ಶಾಸಕ ಐಹೊಳೆ ಅವರು ಆರೋಗ್ಯಾಧಿಕಾರಿಗೆ ದೂರವಾಣಿ ಕರೆ ಮಾಡಿ ತೀವ್ರ ತರಾಟೆಗೆ ತೆಗೆದುಕೊಂಡರು. ಸಾರ್ವಜನಿಕರ ಜೀವದ ಸುರಕ್ಷತೆಯ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದೆ ತಕ್ಷಣ ಆಸ್ಪತ್ರೆಗೆ ಆಗಮಿಸಿ, ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor