ಬೆಂಗಳೂರು | ಬಯೋ ಇನೋವೇಷನ್ ಸೆಂಟರ್‌ನಲ್ಲಿ ಅಗ್ನಿ ಅವಘಡ: 100 ಕೋಟಿ ರೂ.ಗೂ ಹೆಚ್ಚು ನಷ್ಟ
ಬೆಂಗಳೂರು : ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿರುವ ಬೆಂಗಳೂರು ಬಯೋ ಇನೋವೇಷನ್ ಸೆಂಟರ್ (ಬಿಬಿಸಿ)ನಲ್ಲಿ ಅಗ್ನಿ ಅವಢಕ್ಕೆ ಮಿಥೆನಾಲ್ ಸೋರಿಕೆ ಎನ್ನುವ ಅಂಶ ಮೇಲ್ನೋಟಕ್ಕೆ ಗೊತ್ತಾಗಿದ್ದು, ಬರೋಬ್ಬರಿ 100 ಕೋಟಿ ರೂಪಾಯಿಗೂ ಅಧಿಕ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ.
ಘಟನೆ ಸಂಬಂಧ ಬುಧವಾರ ಅಗ್ನಿ ಅವಘಡ ಸಂಭವಿಸಿದ ಸ್ಥಳಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆನಂತರ, ಸಂತ್ರಸ್ತರಾಗಿರುವ ಸ್ಟಾರ್ಟ್‌ಅಪ್ ಸಂಸ್ಥೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿದ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಸರಕಾರದಿಂದ ನೀಡಬಹುದಾದ ನೆರವು ಹಾಗೂ ಪರಿಹಾರದ ಬಗ್ಗೆ ಪರಿಶೀಲಿಸುವ ಭರವಸೆ ನೀಡಿದರು.
ಈ ಕುರಿತು ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿ, ‘ಮಿಥೆನಾಲ್ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿದೆ ಎಂಬುದು ಕಂಡು ಬಂದಿದೆ. ಒಂದು ಕಂಪೆನಿ ಸಂಪೂರ್ಣವಾಗಿ ನಾಶವಾಗಿದ್ದು, ಇತರೆ ಸೆಂಟರ್‌ಗಳು ಹಾನಿಗೊಳಗಾಗಿವೆ. ಆದರೆ, ಯಾರಿಗೂ ಪ್ರಾಣಹಾನಿಯಾಗಿಲ್ಲ’ ಎಂದು ಹೇಳಿದರು.
ಅಂದಾಜು 100 ಕೋಟಿ ರೂ. ಮೌಲ್ಯದ ವಸ್ತುಗಳು ಹಾನಿಯಾಗಿದೆ. ಸುಮಾರು 60 ವಿವಿಧ ಕಂಪೆನಿಗಳು ಕೆಲಸ ಮಾಡುತ್ತಿದ್ದು, ಅದರಲ್ಲಿ 20 ಲ್ಯಾಬ್‍ಗಳಿಗೆ ಹಾನಿಯಾಗಿದೆ. ಮಿಥಾನಾಲ್ ಸಂಗ್ರಹಿಸಿಕೊಂಡಿದ್ದರು. ಘಟನೆ ಹೇಗೆ ಸಂಭವಿಸಿತು ಎಂಬುದರ ಕುರಿತು ತನಿಖೆ ನಡೆಸಿ, ವರದಿ ನೀಡಲಿದ್ದಾರೆ ಎಂದು ತಿಳಿಸಿದರು.
ಸಭೆ: ಸಂತ್ರಸ್ತರಾಗಿರುವ ಸ್ಟಾರ್ಟ್ ಆಪ್ ಸಂಸ್ಥೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿದ ಬಳಿಕ ಮಾತನಾಡಿದ ಪ್ರಿಯಾಂಕ್ ಖರ್ಗೆ, ಅವಘಡದಲ್ಲಿ ಮೌಲ್ಯಯುತ ವಸ್ತುಗಳು ಸುಟ್ಟು ಭಸ್ಮವಾಗಿವೆ, ಕಂಪ್ಯೂಟರ್‌ಗಳಲ್ಲಿ ಸಂಗ್ರಹಿಸಿದ ಮಾಹಿತಿ, ಸಂಶೋಧನೆಗಳು ಹಾಳಾಗಿವೆ. ಸ್ಟಾರ್ಟ್ ಆಪ್‍ಗಳನ್ನು ಹಿಂದಿನ ಸ್ಥಿತಿಗೆ ತೆಗೆದುಕೊಂಡು ಹೋಗಲು ಹೆಚ್ಚಿನ ಶ್ರಮವಹಿಸಬೇಕಾಗುತ್ತದೆ ಎಂದು ತಿಳಿಸಿದರು.
ಮನವಿ: ನೆಲಮಹಡಿ ಸೇರಿ ನಾಲ್ಕು ಅಂತಸ್ತಿನ ಕಟ್ಟಡದ 2ನೆ ಮಹಡಿಯಲ್ಲಿ ಬಿಬಿಸಿ ಕಾರ್ಯ ನಿರ್ವಹಿಸುತ್ತಿದ್ದು, ಮಂಗಳವಾರ ಬೆಳಗ್ಗೆ 5ಗಂಟೆಗೆ ಸೆಂಟರ್‌ನ ಪ್ರಯೋಗಾಲಯದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಿಬಿಸಿಯ ಸೆಂಟರ್‌ನಲ್ಲಿ ಸುಮಾರು 12 ಸಂಶೋಧನಾ ಪ್ರಯೋಗಾಲಯಗಳಿದ್ದು, ಇಲ್ಲಿ ಜೀವ ವಿಜ್ಞಾನ, ಆರೋಗ್ಯ, ಔಷಧಿ, ಜೈವಿಕ ಔಷಧಿ, ಕೃಷಿ, ಆಹಾರ, ಕೈಗಾರಿಕಾ ಜೈವಿಕ ತಂತ್ರಜ್ಞಾನ, ಜೈವಿಕ ಪರಿಸರ ತಂತ್ರಜ್ಞಾನ ಸೇರಿ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ಸಂಶೋಧನೆಗಳು ನಡೆಯುತ್ತಿದ್ದವು ಎಂಬ ಸಂಗತಿಯನ್ನು ಸಚಿವರಿಗೆ ತಿಳಿಸಿದ ಸ್ಟಾರ್ಟ್‍ಪ್‍ಗಳ ಪ್ರತಿನಿಧಿಗಳು ಪರಿಹಾರ ಒದಗಿಸುವಂತೆ ಮನವಿ ಮಾಡಿದರು.