Bengaluru | ಹುಡುಗರಂತೆ ವೇಷ ಧರಿಸಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಯುವತಿಯರ ಬಂಧನ
ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು : ಹುಡುಗರಂತೆ ವೇಷ ಧರಿಸಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಯುವತಿಯರನ್ನು ಇಲ್ಲಿನ ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಟ್ಯಾನರಿ ರಸ್ತೆಯ ನಿವಾಸಿಗಳಾದ ಶಾಲು(27) ಮತ್ತು ನೀಲು(29) ಬಂಧಿತ ಯುವತಿಯರು ಎಂದು ಗುರುತಿಸಲಾಗಿದೆ.
ಈ ಇಬ್ಬರು ಹುಡುಗರ ರೀತಿ ಪ್ಯಾಂಟ್, ಶರ್ಟ್, ಟೋಪಿ ಹಾಕಿಕೊಂಡು ಹಗಲು ವೇಳೆಯಲ್ಲೆ ದ್ವಿಚಕ್ರ ವಾಹನದಲ್ಲಿ ಸುತ್ತಾಡುತ್ತಾ ನಿರ್ಜನ ಪ್ರದೇಶದ ಸುತ್ತಮುತ್ತ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದರು.
ಜ.13 ರಂದು ಸಂಪಿಗೆಹಳ್ಳಿಯ ನಿವಾಸಿ ಸಂಗಮೇಶ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿ ಘಟನಾ ಸ್ಥಳದ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಇಬ್ಬರು ಹುಡುಗರು ನಡೆದುಕೊಂಡು ಹೋಗುತ್ತಿರುವುದು ಕಂಡು ಬಂದಿದೆ.
ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ಚುರುಕುಗೊಳಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದಾಗಲೇ ಅವರು ಹುಡುಗರಲ್ಲ, ಹುಡುಗಿಯರು ಎಂಬುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಹುಡುಗರ ವೇಷ ಧರಿಸಿಕೊಂಡು ಕಳ್ಳತನ ಮಾಡಿರುವುದು ವಿಚಾರಣೆಯಿಂದ ತಿಳಿದು ಬಂದಿದ್ದು, ಇಬ್ಬರು ಯುವತಿಯರನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.