ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ; ಬಿಜೆಪಿ ಕಚೇರಿಗೆ ‘ಕೈ’ ಕಾರ್ಯಕರ್ತರ ಮುತ್ತಿಗೆ ಯತ್ನ: ವಶಕ್ಕೆ
ಬೆಂಗಳೂರು : ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಇಲ್ಲಿನ ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬುಧವಾರ ಬೆಳಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು, ಮಲ್ಲೇಶ್ವರದಲ್ಲಿನ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಮಾರ್ಗಮಧ್ಯೆದಲ್ಲೇ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಮನೋಹರ್ ಅವರು, ಹನ್ನೆರಡು ವರ್ಷಗಳ ಬಿಜೆಪಿ ಆಡಳಿತಾವಧಿಯಲ್ಲಿ 152ಕ್ಕೂ ಹೆಚ್ಚು ಬಾರಿ ಪ್ರಶ್ನೆ ಪತ್ರಿಕೆಗಳು ಸೋರಿಕೆ ಪ್ರಕರಣಗಳು ನಡೆದಿವೆ. ಈ ಎಲ್ಲ ಪ್ರಕರಣಗಳಲ್ಲಿ ಬಿಜೆಪಿ ಮುಖಂಡರು, ಮತ್ತವರ ಪುತ್ರರ ಹೆಸರುಗಳು ಕೇಳಿಬಂದಿದ್ದು, ಯಾರೊಬ್ಬರ ವಿರುದ್ಧವೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಡೆಯುವ ನೀಟ್ ಪರೀಕ್ಷೆಗೆ 22ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಿದೆ. ಹೀಗಾಗಿ ಪ್ರಶ್ನೆ ಪತ್ರಿಕೆ ಸೋರಿಕೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಲಾಠಿ ಪ್ರಹಾರ, ಆಶ್ರುವಾಯು ಸಿಡಿಸಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತಂದಿರುವ ಘಟನೆ ಎಂದು ಅವರು ಆರೋಪಿಸಿದರು.
ಸತ್ಯವನ್ನು ಪ್ರಶ್ನಿಸಿದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಲಾಗಿದೆ. ಕೇಂದ್ರ ಬಿಜೆಪಿ ಸರಕಾರ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡಲೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ಅಲ್ಲದೆ, ದೇಶದ ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಎ.ಆನಂದ್, ಆದಿತ್ಯ, ಚಂದ್ರಶೇಖರ್, ಪುಟ್ಟರಾಜು, ಕುಶಲ್ ಹರುವೇಗೌಡ, ನವೀನ್, ಉಮೇಶ್, ರಂಜಿತ್, ಹೇಮರಾಜ್, ಪ್ರವೀಣ್, ಓಬಲೇಶ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.