Bengaluru | ಸಚಿವ ಧರ್ಮೇಂದ್ರ ಪ್ರಧಾನ್ ಪ್ರತಿಕೃತಿ ದಹಿಸಿ ಯುವ ಕಾಂಗ್ರೆಸ್ ಆಕ್ರೋಶ
ಬೆಂಗಳೂರು : ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ನೀಟ್ ಪರೀಕ್ಷೆಯಲ್ಲಿನ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ವ್ಯವಸ್ಥೆಯ ವೈಫಲ್ಯವನ್ನು ಖಂಡಿಸಿ, ಬುಧವಾರದಂದು ಇಲ್ಲಿನ ರೇಸ್‍ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಆವರಣದಲ್ಲಿ ಯುವ ಕಾಂಗ್ರೆಸ್ ವತಿಯಿಂದ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಇದೇ ವೇಳೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಎಚ್.ಎಸ್. ಮಾತನಾಡಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನೇ ಕುಸಿತಗೊಳಿಸಿವೆ. ಲಕ್ಷಾಂತರ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಅನ್ಯಾಯವಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದಲು ಕೇಂದ್ರ ಸರಕಾರ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.