Bengaluru | ಖರ್ಗೆ ಸಭೆ ನಡೆಸಿದ್ದ ಸ್ಥಳ ಶುದ್ಧೀಕರಣ : ಎಫ್‍ಐಆರ್ ದಾಖಲು
ಬೆಂಗಳೂರು : ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ(ಎಐಎಸಿಸಿ) ರಾಷ್ಟ್ರೀಯಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದಲ್ಲಿ ಸಭೆ ನಡೆಸಿದ್ದ ಸ್ಥಳವನ್ನು ಶುದ್ಧೀಕರಣ ಮಾಡಿದ ಆರೋಪದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ‘ಶೂನ್ಯ ಎಫ್‍ಐಆರ್’ ದಾಖಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ, ಪಂಗಡ ಘಟಕದ ಮಾಜಿ ಸದಸ್ಯ ಟಿ. ರಾಮಪ್ಪ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 196 ಹಾಗೂ ನಾಗರಿಕ ಹಕ್ಕುಗಳ ರಕ್ಷಣಾ ಕಾಯ್ದೆಯ ಸೆಕ್ಷನ್ 7ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಖರ್ಗೆ ಅವರ ಕಾರ್ಯಕ್ರಮದ ಬಳಿಕ ನಡೆದಿದ್ದ ಎನ್ನಲಾದ ಶುದ್ಧೀಕರಣ ಕಾರ್ಯವು ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅದರಂತೆ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಉತ್ತರಾಖಂಡದ ಹಲ್ದ್ವಾನಿ ಪೊಲೀಸ್ ಠಾಣೆಯ ವ್ಯಾಪ್ತಿಗೆ ವರ್ಗಾಯಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.