ಬೆಂಗಳೂರು : ಹೈಡ್ರೋಪೋನಿಕ್ ಗಾಂಜಾವನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದು, 6.33 ಕೋಟಿ ರೂ. ಮೌಲ್ಯದ 18.09 ಕೆ.ಜಿ. ಹೈಡ್ರೋಪೆಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ಆರೋಪಿಗಳಿಬ್ಬರು ಬ್ಯಾಂಕಾಕ್‍ನಿಂದ  ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಮೊದಲ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದಾಗ 3.12 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಸಿಕ್ಕಿದೆ. ಇದರ ಮೌಲ್ಯ ಸುಮಾರು 1.09 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಮತ್ತೊಬ್ಬ ಪ್ರಯಾಣಿಕನ ಬ್ಯಾಗ್‍ನಲ್ಲಿ 14.97 ಕೆ.ಜಿ. ಗಾಂಜಾ ಪತ್ತೆಯಾಗಿದ್ದು, ಇದರ ಮೌಲ್ಯ 5.24 ಕೋಟಿ ರೂ. ಎಂದು ಅಧಿಕಾರಿಗಳು ಹೇಳಿದ್ದಾರೆ.

ಬ್ಯಾಂಕಾಕ್‍ನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ಪ್ರಯಾಣಿಕರು ಮಾದಕ ವಸ್ತುವನ್ನು ಬ್ಯಾಗೇಜ್‍ನಲ್ಲಿ ಅಡಗಿಸಿಟ್ಟು ಸಾಗಿಸುತ್ತಿದ್ದರು ಎನ್ನಲಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುವನ್ನು ಜಪ್ತಿ ಮಾಡಿರುವ ಅಧಿಕಾರಿಗಳು, ಇಬ್ಬರನ್ನೂ ಮಾದಕ ದ್ರವ್ಯಗಳು ಮತ್ತು ಅಮಲು ಪದಾರ್ಥಗಳ ಕಾಯ್ದೆ ಅಡಿಯಲ್ಲಿ ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor