Bengaluru | ವಿದ್ಯಾರ್ಥಿಯ ಹತ್ಯೆ ಪ್ರಕರಣ: ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರ ಬಂಧನ
ಸಾಂದರ್ಭಿಕ ಚಿತ್ರ
ಬೆಂಗಳೂರು : ವಿದ್ಯಾರ್ಥಿನಿಯೊಬ್ಬಳ ವಿಚಾರವಾಗಿ ನಡೆದ ಕ್ಷುಲ್ಲಕ ಜಗಳದಲ್ಲಿ ನಡೆದ ವಿದ್ಯಾರ್ಥಿ ಯೋಗೇಶ್ (19) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪ್ರಾಪ್ತರು ಸೇರಿ ನಾಲ್ವರು ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಭುವನ್ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ನಾಗರಭಾವಿಯ ಮುದ್ದಿನಪಾಳ್ಯ ರಸ್ತೆಯಲ್ಲಿರುವ ಖಾಸಗಿ ಕಾಲೇಜಿನಲ್ಲಿ ಯೋಗೇಶ್ ಹಾಗೂ ಭುವನ್ ಪ್ರಥಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ಭುವನ್ ಅದೇ ಕಾಲೇಜಿನ ಹಿರಿಯ ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡು ಆಕೆಯ ಹಿಂದೆ ಸುತ್ತಾಡುತ್ತಿದ್ದ ಎನ್ನಲಾಗಿದೆ. ಆದರೆ, ಯುವತಿ ಭುವನ್‍ನ ಪ್ರೀತಿಯನ್ನು ತಿರಸ್ಕರಿಸಿದ್ದಳು. ಈ ನಡುವೆ ಯೋಗೇಶ್ ಆ ಯುವತಿಯ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ ಎನ್ನಲಾಗಿದ್ದು, ಇದೇ ವಿಚಾರಕ್ಕೆ ಭುವನ್ ಕೋಪಗೊಂಡಿದ್ದ ಎನ್ನಲಾಗಿದೆ.
ಸೆ.30ರಂದು ಮಧ್ಯಾಹ್ನ ಸುಮಾರು 2 ಗಂಟೆಗೆ ಯೋಗೇಶ್‍ಗೆ ಕರೆ ಮಾಡಿದ ಭುವನ್, ಕಾಲೇಜಿನ ಹಿಂಭಾಗದ ರಸ್ತೆಯಲ್ಲಿರುವ ಜಿಮ್ ಬಳಿ ಬರುವಂತೆ ತಿಳಿಸಿದ್ದನು. ಯೋಗೇಶ್ ಸ್ಥಳಕ್ಕೆ ತೆರಳುತ್ತಿದ್ದಂತೆ ಭುವನ್ ಹಾಗೂ ಆತನ ಸಹಚರರು ಆತನೊಂದಿಗೆ ಜಗಳ ಆರಂಭಿಸಿದ್ದಾರೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದಾಗ ಭುವನ್ ಹಾಗೂ ಆತನ ಸಹಚರರು ಯೋಗೇಶ್‍ನ ಎದೆ ಭಾಗಕ್ಕೆ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಯೋಗೇಶ್‍ನನ್ನು ಸ್ಥಳೀಯರು ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಮಾರ್ಗಮಧ್ಯೆಯೇ ಆತ ಮೃತಪಟ್ಟಿದ್ದಾನೆ. ಘಟನೆ ಕುರಿತು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.