Bengaluru | ರೈತರ ಕೃಷಿ ಸಾಲ ಮನ್ನಾಕ್ಕೆ ಆಗ್ರಹಿಸಿ ಧರಣಿ
ಬೆಂಗಳೂರು : ರಾಜ್ಯದ ಬರಪೀಡಿತ ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಸೋಮವಾರ ನಗರದ ಫ್ರೀಡಂಪಾರ್ಕ್‍ನಲ್ಲಿ ಧರಣಿ ಸತ್ಯಾಗ್ರಹ ನಡೆಯಿತು.
ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ರಾಜ್ಯದ 217 ತಾಲೂಕುಗಳು ಬರಗಾಲಕ್ಕೆ ತುತ್ತಾಗಿದ್ದು, ಸುಮಾರು 20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಅಂದಾಜು 20 ಸಾವಿರ ಕೋಟಿ ರೂ.ಗೂ ಅಧಿಕ ಮೌಲ್ಯದ ಬೆಳೆ ಹಾನಿಯಾಗಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದರು.
ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ, ಕೃಷಿ ಕಾರ್ಮಿಕರ ಕೂಲಿ ಹಾಗೂ ನೀರಾವರಿಗೆ ಮಾಡಿದ ವೆಚ್ಚವನ್ನೂ ಮರಳಿ ಪಡೆಯಲಾಗದ ಸ್ಥಿತಿ ನಿರ್ಮಾಣವಾಗಿದೆ. ಒಂದೆಡೆ ಬೆಳೆ ನಷ್ಟವಾಗಿದ್ದರೆ, ಮತ್ತೊಂದೆಡೆ ಸಾಲ ವಸೂಲಾತಿ ಕಿರುಕುಳ ರೈತರ ಸಂಕಷ್ಟವನ್ನು ಹೆಚ್ಚಿಸಿದೆ. ಇಂತಹ ಸಂದರ್ಭದಲ್ಲಿ ಸರಕಾರ ತಾತ್ಕಾಲಿಕ ಪರಿಹಾರಕ್ಕೆ ಸೀಮಿತವಾಗದೆ, ರೈತರ ಸಾಲದ ಹೊರೆಯನ್ನು ಸಂಪೂರ್ಣವಾಗಿ ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.
ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದೆ. ಕರ್ನಾಟಕದಲ್ಲಿಯೂ ರೈತರ ಸಂಕಷ್ಟವನ್ನು ಪರಿಗಣಿಸಿ ತಕ್ಷಣವೇ ಸಂಪೂರ್ಣ ಕೃಷಿ ಸಾಲ ಮನ್ನಾ ಘೋಷಿಸಬೇಕು. ಬರಗಾಲದಿಂದ ಸಂಕಷ್ಟಕ್ಕೀಡಾದ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ 25 ಸಾವಿರ ರೂ. ಬೆಳೆ ನಷ್ಟ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು. ಗ್ರಾಮೀಣ ರೈತ ಮಹಿಳೆಯರು ಖಾಸಗಿ ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲಗಳ ವಸೂಲಾತಿಯನ್ನು ಎರಡು ವರ್ಷಗಳ ಕಾಲ ಸ್ಥಗಿತಗೊಳಿಸಲು ಕಾನೂನು ಕ್ರಮ ಕೈಗೊಳ್ಳಬೇಕು. ಕೃಷಿ ಪಂಪ್‍ಸೆಟ್‍ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು ಎಂದು ಅವರು ಒತ್ತಾಯಿಸಿದರು.
ದಸರಾ ಸಂದರ್ಭದಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಹೆಚ್ಚಿನ ವಿದ್ಯುತ್ ಬಳಸುವ ಬದಲು, ರೈತರ ಒಣಗುತ್ತಿರುವ ಬೆಳೆಗಳನ್ನು ರಕ್ಷಿಸಲು ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಆದ್ಯತೆ ನೀಡಬೇಕು. ಬರದ ಸಂಕಷ್ಟದ ಸಂದರ್ಭದಲ್ಲಿ ಜನಪ್ರತಿನಿಧಿಗಳು ಒಂದು ವರ್ಷದ ವೇತನ ಮತ್ತು ಭತ್ಯೆಗಳನ್ನು ತ್ಯಜಿಸಿ, ಆ ಹಣವನ್ನು ರೈತರ ನೆರವಿಗೆ ಬಳಸಬೇಕು ಎಂದು ಶಾಂಕುಮಾರ್ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರನ್ನು ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ, ಒಂದು ವಾರದೊಳಗೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ರೈತ ಮುಖಂಡರ ಸಭೆ ಕರೆದು ಸಮಸ್ಯೆಗಳ ಕುರಿತು ಚರ್ಚಿಸುವುದಾಗಿ ಭರವಸೆ ನೀಡಿದರು.
ಈ ವೇಳೆಯಲ್ಲಿ ರೈತರ ಸಂಕಷ್ಟಗಳನ್ನು ಸರಕಾರದ ಗಮನ ಸೆಳೆಯಲು ಧರಣಿ ನಿರತರು ತಲಾ ಒಂದು ರೂ. ಮತ್ತು ಐದು ರೂ. ನಾಣ್ಯಗಳನ್ನು ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ, ಒಟ್ಟು 1,770 ರೂ. ಮೊತ್ತದ ಚೆಕ್ ಅನ್ನು ಸರಕಾರಕ್ಕೆ ನೀಡಲು ಮುಂದಾದರು. ‘ಸರಕಾರದ ಭಿಕ್ಷೆ ಬೇಡ’ ಎಂಬ ಸಂದೇಶದೊಂದಿಗೆ ಈ ಮೂಲಕ ರೈತರ ಸಂಕಷ್ಟದ ಗಂಭೀರತೆಯನ್ನು ಸರಕಾರಕ್ಕೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದರು.
ರೈತ ಮುಖಂಡರಾದ ಸುರೇಶ್ ಎಂ.ಪಾಟೀಲ್, ನರಸಾರೆಡ್ಡಿ ಪಟೇಲ್, ಕರಬಸಪ್ಪಗೌಡ, ಗುರುಸಿದ್ದಪ್ಪ, ದೇವಕುಮಾರ್, ಎಲ್ಲಪ್ಪ ನಾಯಕ, ಧರ್ಮರಾಜ್, ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಮೂಕ್ಕಳ್ಳಿ ಮಹದೇವಸ್ವಾಮಿ, ಮಾರ್ಬಳ್ಳಿ ನೀಲಕಂಠಪ್ಪ, ಉಡಿಗಾಲ ರೇವಣ್ಣ, ಶ್ರೀನಿವಾಸಲು ಸೇರಿದಂತೆ ಹಲವರು ಭಾಗವಹಿಸಿದ್ದರು.