ಬೆಂಗಳೂರು: ಕಾರು ಗ್ಯಾರೇಜ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಮೂರು ಕಾರುಗಳು ಸುಟ್ಟು ಭಸ್ಮವಾಗಿರುವ ಘಟನೆ ನಗರದ ಜಿಕೆವಿಕೆ ಬಳಿ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಜಿಕೆವಿಕೆ ಬಳಿ ಕೌಶಿಕ್ ಎಂಬುವರಿಗೆ ಸೇರಿದ ಕಾರು ಗ್ಯಾರೇಜ್‌ನಲ್ಲಿ ಅ.11ರ ಬೆಳಗಿನ ಜಾವ ಸುಮಾರು 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಗ್ಯಾರೇಜ್‌ನಾದ್ಯಂತ ವ್ಯಾಪಿಸಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

ಘಟನೆಯಲ್ಲಿ ಮೂರು ಕಾರುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಜನವಸತಿ ಪ್ರದೇಶದ ಸಮೀಪದಲ್ಲೇ ಗ್ಯಾರೇಜ್ ಇದ್ದ ಕಾರಣ ಬೆಂಕಿ ವ್ಯಾಪಿಸುವ ಆತಂಕದಿಂದ ಕೆಲಕಾಲ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಸಕಾಲದಲ್ಲಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor