Bengaluru | 5.15 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ: ವಿದೇಶಿ ಪ್ರಜೆ ವಶಕ್ಕೆ
ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು : ಬಾಡಿಗೆ ಮನೆಯಲ್ಲಿದ್ದುಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಬೆಂಗಳೂರು ನಗರ ಮಾದಕ ದ್ರವ್ಯ ವಿರೋಧಿ ವಿಭಾಗದ ಪೊಲೀಸರು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ಅರ್ನೆಸ್ಟ್ ಒನ್ಯೆಕಾಚಿ ಉಗಾ(45) ಎಂಬಾತನೇ ಪೊಲೀಸರು ವಶಕ್ಕೆ ಪಡೆದುಕೊಂಡ ಆರೋಪಿ ಎಂದು ಗುರುತಿಸಲಾಗಿದೆ. ಈತ ಮಾರತ್ತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮುನೆಕೊಳಲು ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ಇದ್ದುಕೊಂಡು ಎಂಡಿಎಂಎ ಮತ್ತು ಎಕ್ಸ್ಟಸಿ ಮಾತ್ರೆಗಳ ಮಾರಾಟದಲ್ಲಿ ತೊಡಗಿದ್ದ. ಈ ಬಗ್ಗೆ ನಿರ್ದಿಷ್ಟ ಮಾಹಿತಿ ಆಧಾರದ ಮೇಲೆ, ಮಾದಕ ದ್ರವ್ಯ ವಿರೋಧಿ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯ ಸಮಯದಲ್ಲಿ, ಪೊಲೀಸರು ಆರೋಪಿಯಿಂದ 2.5 ಕೆ.ಜಿ. ಎಂಡಿಎಂಎ ಮತ್ತು 300 ಎಕ್ಸ್ಟಸಿ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮಾದಕ ವಸ್ತುಗಳ ಒಟ್ಟು ಮೌಲ್ಯ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 5.15 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಸದ್ಯ, ಆರೋಪಿ ಮೇಲೆ ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಎರಡು ಕ್ರಿಮಿನಲ್ ಪ್ರಕರಣಗಳು ಇರುವುದು ಬೆಳಕಿಗೆ ಬಂದಿದ್ದು, ಹೆಣ್ಣೂರು ಪೊಲೀಸ್ ಠಾಣೆ ಮತ್ತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದಾಖಲಾಗಿತ್ತು. ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿ, ಮತ್ತೆ ಅಕ್ರಮ ಚಟುವಟಿಕೆಗಳನ್ನು ಆರಂಭಿಸಿದ್ದ. ಆತನ ಚಲನವಲನಗಳ ಮೇಲೆ ನಿಗಾ ಇರಿಸಿದ್ದ ಪೊಲೀಸರು, ಮತ್ತೆ ಕಳ್ಳಸಾಗಣೆ ಚಟುವಟಿಕೆಗಳಲ್ಲಿ ತೊಡಗಿದ್ದಾಗ ಆತನನ್ನು ವಶಕ್ಕೆ ಪಡೆದಿರುವುದಾಗಿ ಮಾಹಿತಿ ನೀಡಿದ್ದಾರೆ.
ಎನ್‍ಡಿಪಿಎಸ್ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಕಳ್ಳಸಾಗಣೆ ವಸ್ತುಗಳ ಮೂಲವನ್ನು ಪತ್ತೆಹಚ್ಚಲು ಮತ್ತು ದಂಧೆಯಲ್ಲಿ ಭಾಗಿಯಾಗಿರುವ ಇತರರನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.