Bengaluru | ಹೋಟೆಲ್‌ನಲ್ಲಿ ಅಗ್ನಿ ಅವಘಡ: ಓರ್ವ ಮೃತ್ಯು, ನಾಲ್ವರಿಗೆ ಗಾಯ
ಸಾಂದರ್ಭಿಕ ಚಿತ್ರ | Image by partystock on Magnific
ಬೆಂಗಳೂರು : ಹೋಟೆಲ್‌ವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಓರ್ವ ಮೃತಪಟ್ಟು, ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಡರಾತ್ರಿ ಬೆಂಗಳೂರಿನ ನಾಗರಬಾವಿಯಲ್ಲಿ ನಡೆದಿರುವುದು ವರದಿಯಾಗಿದೆ.
ಮೃತರನ್ನು ರಾಜಕುಮಾರ್(45) ಎಂದು ಗುರುತಿಸಲಾಗಿದೆ.
ನಾಗರಬಾವಿಯ ಹೊರವರ್ತುಲ ರಸ್ತೆಯ ಪಕ್ಕದ ಸರ್ವಿಸ್ ರಸ್ತೆಯಲ್ಲಿರುವ ಹೋಟೆಲ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಅಲ್ಲೇ ಕೆಲಸ ಮಾಡುತ್ತಿದ್ದ 8 ಮಂದಿ ಹೋಟೆಲ್ ಸಿಬ್ಬಂದಿ ವಾಸವಿದ್ದ ಹೋಟೆಲ್ ಕಟ್ಟಡದ ಮೇಲಿನ ಮಹಡಿಗೂ ಬೆಂಕಿ ವ್ಯಾಪಿಸಿದೆ. ದಟ್ಟ ಹೊಗೆಯಿಂದಾಗಿ ಐವರು ಸಿಬ್ಬಂದಿ ಅಸ್ವಸ್ಥಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ 45 ವರ್ಷದ ರಾಜಕುಮಾರ್ ಅವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಳಿದ ನಾಲ್ವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.