ಬೆಂಗಳೂರು : ಮತಗಳ್ಳತನದ ವಿರುದ್ಧ ಹೊಸದಿಲ್ಲಿಯ ಜಂತರ್‌ಮಂತರ್‌ನಲ್ಲಿ ನಡೆಸಲು ಉದ್ದೇಶಿಸಿದ್ದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸ್ ಹಾಗೂ ಅರೆ ಮಿಲಿಟರಿ ಪಡೆಗಳನ್ನು ಬಳಸಿದ ಕೇಂದ್ರ ಸರಕಾರದ ನಡೆಯನ್ನು ತೀವ್ರವಾಗಿ ಖಂಡಿಸಿರುವ ಎಡಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು, ನಗರದ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಚಿತ್ರನಟ ಕಿಶೋರ್ ಮಾತನಾಡಿ, ‘ದಿಲ್ಲಿಯ ಜಂತರ್‌ಮಂತರ್‌ನಲ್ಲಿ ನಡೆಯಬೇಕಾದ ಪ್ರತಿಭಟನೆಯನ್ನು ಕೇಂದ್ರ ಸರಕಾರ ತಡೆದಿದೆ. ಅಪರಾಧಿ ಸರಕಾರದಿಂದ ಬೇರೆ ಏನು ನಿರೀಕ್ಷಿಸಲು ಸಾಧ್ಯವಿಲ್ಲ. ಇದನ್ನು ಗಂಬೀರವಾಗಿ ಪರಿಗಣಿಸಬೇಕು. ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆಯೇ ಇಲ್ಲದಾಗಿದೆ. ದೇಶದಲ್ಲಿ ಸರ್ವಾಧಿಕಾರ ಪ್ರಭುತ್ವವಿದೆ’ ಎಂದು ದೂರಿದರು.

ನಮ್ಮ ತೆರಿಗೆ ದುಡ್ಡಿನಲ್ಲಿ ಸಂಬಳ ಪಡೆಯುತ್ತಿರುವ ಪೊಲೀಸರನ್ನು ನಮ್ಮ ವಿರುದ್ಧವೇ ಕೆಲಸ ಮಾಡುವಂತೆ ಮಾಡಿದ್ದಾರೆ. ಜನರು ಕೇಳುವ ಪ್ರಶ್ನೆಗಳಿಗೆ ಉತ್ತರವನ್ನು ನೀಡಲು ಸಾಧ್ಯವಾಗದ ಕೇಂದ್ರ ಸರಕಾರ, ಜನರ ಹಕ್ಕುಗಳನ್ನು ದಮನ ಮಾಡುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜಪಿಗೆ ಜನ ವಿರೋಧವಿದ್ದರೂ, ಆ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಕಾನೂನುಬಾಹಿರವಾಗಿ ಗೆದ್ದಿದೆ. ಇದನ್ನು ಪ್ರಶ್ನಿಸಬೇಕಾದ ನ್ಯಾಯಾಂಗ ವ್ಯವಸ್ಥೆಯು ಭ್ರಷ್ಟಗೊಂಡಿದೆ ಎಂದು ಅವರು ಹೇಳಿದರು.

ಜನರ ಮತಗಳಿಗೆ ಬೆಲೆಯೇ ಇಲ್ಲದಂತಾಗಿರುವ ಈ ಸಂದರ್ಭದಲ್ಲಿ, ಪ್ರಜಾಪ್ರಭುತ್ವವನ್ನು ಉಳಿಸಲು ಜನರು ಬೀದಿಗೆ ಇಳಿದು ಹೋರಾಟ ಮಾಡಬೇಕಾಗಿದೆ. 12 ವರ್ಷಗಳಿಂದ ದೇಶವನ್ನು ದೇಶದ್ರೋಹಿಗಳ ಕೈಗೆ ಕೊಟ್ಟಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಿಪಿಎಂ, ಸಿಪಿಐ, ಎಸ್‌ಯುಸಿಐ ಸೇರಿದಂತೆ ಎಡ ಪಕ್ಷಗಳ ಮುಖಂಡರು, ವಿದ್ಯಾರ್ಥಿಗಳು ಹಾಗೂ ಪಕ್ಷಗಳ ನೂರಾರು ಕಾರ್ಯಕರ್ತರು ಭಾಗವಹಿಸಿ, ಕೇಂದ್ರ ಸರಕಾರ, ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್‌ಐಆರ್) ಕ್ರಮದ ಬಗ್ಗೆ ತನಿಖೆಯಾಗಬೇಕು. ಇದರ ಹಿಂದೆ ಇರುವ ಬಿಜೆಪಿ ಮತ್ತು ಆರೆಸ್ಸೆಸ್‌ನ ಮುಖಂಡರ ವಿರುದ್ಧ ಕ್ರಮ ಜರುಗಿಸಬೇಕು. ಈ ನಿಟ್ಟಿನಲ್ಲಿ ದೇಶಾದ್ಯಂತ ಎರಡನೇ ಸ್ವಾತಂತ್ರ್ಯ ಹೋರಾಟ ಆರಂಭವಾಗಿದೆ.

-ಕಿಶೋರ್, ನಟ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor