Bengaluru | ಎಸ್‍ಐಆರ್ ಕರ್ತವ್ಯದಲ್ಲಿದ್ದ ಸಿಬ್ಬಂದಿ ಮೇಲೆ ಹಲ್ಲೆ; ಇಬ್ಬರು ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ | PC : AI
ಬೆಂಗಳೂರು : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‍ಐಆರ್) ಕೆಲಸಕ್ಕೆ ತೆರಳಿದ್ದ ಸರಕಾರಿ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಇಬ್ಬರು ಆರೋಪಿಗಳನ್ನು ದೇವರಜೀವನಹಳ್ಳಿ (ಡಿಜೆ ಹಳ್ಳಿ) ಪೊಲೀಸರು ಬಂಧಿಸಿದ್ದಾರೆ.
ಡಿ.ಜೆ.ಹಳ್ಳಿಯ ದಸ್ತಗೀರ್ ಮತ್ತು ಯಾರಬ್ ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಗುರುವಾರ (ಜು.29) ಮಧ್ಯಾಹ್ನ ಸುಮಾರು 1:30ರ ವೇಳೆಗೆ ಸರಕಾರಿ ಸಿಬ್ಬಂದಿಗಳು ಎಸ್‍ಐಆರ್ ಸಮೀಕ್ಷಾ ಕಾರ್ಯಕ್ಕಾಗಿ ತೆರಳಿದ್ದರು. ಈ ವೇಳೆ ಸ್ಥಳಕ್ಕೆ ಬಂದ ದಸ್ತಗೀರ್ ತನಗೂ ಎಸ್‍ಐಆರ್ ಫಾರ್ಮ್ ನೀಡುವಂತೆ ಅಧಿಕಾರಿಗಳ ಬಳಿ ಪಟ್ಟು ಹಿಡಿದು ಗಲಾಟೆ ಆರಂಭಿಸಿದ್ದಾನೆ ಎನ್ನಲಾಗಿದೆ. ಆದರೆ ದಸ್ತಗೀರ್ ಈಗಾಗಲೇ ಜಯನಗರಕ್ಕೆ ವಾಸ್ತವ್ಯ ಬದಲಾಯಿಸಿರುವುದರಿಂದ ಆತನಿಗೆ ಫಾರ್ಮ್ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದರು ಎಂದು ತಿಳಿದು ಬಂದಿದೆ.
ಫಾರ್ಮ್ ನೀಡದಿದ್ದಕ್ಕೆ ಆಕ್ರೋಶಗೊಂಡ ಆರೋಪಿ ದಸ್ತಗೀರ್ ಹಾಗೂ ಆತನ ಸಹಚರ ಯಾರಬ್ ಕರ್ತವ್ಯನಿರತ ಅಧಿಕಾರಿಯ ಮುಖಕ್ಕೆ ಹೊಡೆದಿದ್ದಾರೆ. ಹಲ್ಲೆಯಿಂದಾಗಿ ಎಸ್‍ಐಆರ್ ಕಾರ್ಯಕ್ಕೆ ನಿಯೋಜನೆಗೊಂಡ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸೂಪರಿಂಟೆಂಡೆಂಟ್ ಫಕೀರಪ್ಪ ಗಾಯಗೊಂಡಿದ್ದಾರೆ.
ಸ್ಥಳದಲ್ಲಿದ್ದ ಸಾರ್ವಜನಿಕರು ಕೂಡಲೇ ಮಧ್ಯಪ್ರವೇಶಿಸಿ ಗಲಾಟೆಯನ್ನು ಬಿಡಿಸಿದ್ದಾರೆ. ಗಾಯಗೊಂಡ ಅಧಿಕಾರಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ನಂತರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ.