ಬೆಂಗಳೂರು | ವೇತನ ಹೆಚ್ಚಳಕ್ಕೆ ಆಗ್ರಹಿಸಿ ‘ಬಿಸಿಯೂಟ ನೌಕರ’ರಿಂದ ಅಹೋರಾತ್ರಿ ಧರಣಿ
ಬೆಂಗಳೂರು : ಆಯವ್ಯಯದಲ್ಲಿ ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ, ನಗರದ ಫ್ರೀಡಂ ಪಾರ್ಕ್‍ನಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ವತಿಯಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
2014ರಿಂದ ಕೇಂದ್ರ ಸರಕಾರ ಯಾವುದೇ ಗೌರವ ಧನ ಹೆಚ್ಚಳ ಮಾಡಿಲ್ಲವಾದ್ದರಿಂದ ಕೂಡಲೇ 26 ಸಾವಿರ ರೂ.ಗಳಿಗೆ ಗೌರವ ಧನ ಹೆಚ್ಚಿಸಬೇಕು. ಅಲ್ಲಿಯ ವರೆಗೆ ಕೇರಳ, ತಮಿಳುನಾಡು, ಹರ್ಯಾಣ ರಾಜ್ಯಗಳಲ್ಲಿ ನೀಡುವಂತೆ 7ಸಾವಿರ ರೂ.ದಿಂದ 12 ಸಾವಿರ ವೇತನ ನೀಡಬೇಕು ಎಂದು ಧರಣಿನಿರತರು ಆಗ್ರಹಿಸಿದರು.
ಸರಕಾರದ ಆದೇಶದಂತೆ ಮೊಟ್ಟೆ ಸುಲಿದ 30 ಪೈಸೆ ಹಣವನ್ನು ಕಡ್ಡಾಯವಾಗಿ ನೀಡಬೇಕು. ಎಸ್‍ಡಿಎಂಸಿ ಕಿರುಕುಳ, ದೌರ್ಜನ್ಯ ನಿಲ್ಲಿಸುವಂತೆ ಸರಕಾರ ಕ್ರಮವಹಿಸಬೇಕು. ಅಡುಗೆ ಕೇಂದ್ರಗಳು ಇಲ್ಲದ ಕಡೆ ಸುಸಜ್ಜಿತವಾದ ಅಡುಗೆ ಕೇಂದ್ರವನ್ನು ನಿರ್ಮಾಣ ಮಾಡಬೇಕು. ಉತ್ತರಪ್ರದೇಶ, ಪಂಜಾಬ್ ರಾಜ್ಯದ ಹೈಕೋರ್ಟ್ ತೀರ್ಮಾನಿಸಿದಂತೆ ವರ್ಷದ 12 ತಿಂಗಳು ಕೆಲಸದ ಜತೆಗೆ ಕನಿಷ್ಠ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಎಂಡಿಎಂ ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಮಾಡಬೇಕು. ಕ್ಲಸ್ಟರ್ ಸಭೆಗಳನ್ನು ಕಡ್ಡಾಯವಾಗಿ ಪ್ರತಿ ಜಿಲ್ಲೆಯಲ್ಲಿ ನಡೆಸಬೇಕು. ಅಕ್ಷರ ದಾಸೋಹ ಯೋಜನೆಯನ್ನು ಸಂಪೂರ್ಣವಾಗಿ ಶಿಕ್ಷಣ ಇಲಾಖೆಯಡಿಯಲ್ಲಿಯೇ ನಡೆಸಬೇಕು. ಕೆಲಸದ ಸ್ಥಳಗಳಲ್ಲಿ ಮರಣ ಹೊಂದಿದವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿ ಶಾಲೆಯಲ್ಲಿ ಕನಿಷ್ಠ 2ಜನ ಅಡುಗೆ ಸಿಬ್ಬಂದಿಯನ್ನು ನೇಮಿಸಿಕೊಳ್ಳಬೇಕು. ನಿವೃತ್ತಿ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು ಎಂದು ಧರಣಿನಿರತರು ಆಗ್ರಹಿಸಿದರು.
2023ರ ವಿಧಾನ ಸಭೆ ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ 6 ಸಾವಿರ ರೂ.ಗಳ ಗೌರವಧನವನ್ನು ಹೆಚ್ಚಿಸಬೇಕು. ಹಾಜರಾತಿ ಆಧಾರದಲ್ಲಿ ಕೆಲಸದಿಂದ ತೆಗೆಯುವ ಕ್ರಮ ನಿಲ್ಲಿಸಬೇಕು. ಬಿಸಿಯೂಟ ಯೋಜನೆಯನ್ನು ಖಾಯಂ ಮಾಡಬೇಕು. ಖಾಯಂ ಮಾಡುವ ತನಕ 45 ಮತ್ತು 46ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಪಾರಸ್ಸಿನಂತೆ ಕಾರ್ಮಿಕರೆಂದು ಗುರುತಿಸಬೇಕು ಎಂದು ಒತ್ತಾಯಿಸಿದರು.
ಧರಣಿಯಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಗೌರವಾಧ್ಯಕ್ಷೆ ಎಸ್.ವರಲಕ್ಷ್ಮೀ, ಅಧ್ಯಕ್ಷೆ ಲಕ್ಷ್ಮೀದೇವಿ, ಖಜಾಂಚಿ ಮಹಾದೇವಮ್ಮ, ಪ್ರದಾನ ಕಾರ್ಯದರ್ಶಿ ಮಾಲಿನಿ ಮೇಸ್ತಾ ಮತ್ತಿತರರು ಹಾಜರಿದ್ದರು.