ಲಾಠಿಗಳಿಂದ ನ್ಯಾಯದ ಧ್ವನಿಯನ್ನು ಶಾಶ್ವತವಾಗಿ ಹತ್ತಿಕ್ಕಲು ಸಾಧ್ಯವಿಲ್ಲ : ಬಿ.ಕೆ.ಹರಿಪ್ರಸಾದ್
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ದಿಲ್ಲಿ ಪೊಲೀಸರು ಬಂಧನಕ್ಕೊಳಪಡಿಸಿರುವುದು ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ. ದೇಶದ ಲೋಕಸಭೆಯ ವಿರೋಧ ಪಕ್ಷದ ನಾಯಕನನ್ನೇ ಬಂಧಿಸುವುದು ಅಘೋಷಿತ ತುರ್ತು ಪರಿಸ್ಥಿತಿ ಅಲ್ಲದೆ ಮತ್ತೇನು? ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಕಿಡಿಗಾರಿದ್ದಾರೆ.
ಮಂಗಳವಾರ ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಲಾಠಿ ಬೀಸಿ ಅವರ ಧ್ವನಿಯನ್ನು ಹತ್ತಿಕ್ಕಿದ ಕೇಂದ್ರ ಸರಕಾರ, ಈಗ ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿದ ಪ್ರತಿಪಕ್ಷದ ನಾಯಕರನ್ನೂ ಪೊಲೀಸ್ ಬಲದಿಂದ ಮೌನಗೊಳಿಸಲು ಹೊರಟಿದೆ. ಇದು ಪ್ರಜಾಪ್ರಭುತ್ವದ ಆಡಳಿತವಲ್ಲ, ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರಕಾರದ ನಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, ಪೊಲೀಸ್ ಪಡೆಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳ ಪ್ರಶ್ನೆಗಳಿಂದಲೂ, ರಾಹುಲ್ ಗಾಂಧಿ ಅವರ ಹೋರಾಟದಿಂದಲೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬಂಧನಗಳಿಂದ ಸತ್ಯವನ್ನು ಮುಚ್ಚಲು ಸಾಧ್ಯವಿಲ್ಲ, ಲಾಠಿಗಳಿಂದ ನ್ಯಾಯದ ಧ್ವನಿಯನ್ನು ಶಾಶ್ವತವಾಗಿ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹರಿಪ್ರಸಾದ್ ತಿಳಿಸಿದ್ದಾರೆ.
ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ವಿದ್ಯಾರ್ಥಿಗಳ ನ್ಯಾಯಯುತ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಬಂಧಿಸಿರುವ ಎಲ್ಲ ನಾಯಕರು ಮತ್ತು ವಿದ್ಯಾರ್ಥಿಗಳನ್ನು ತಕ್ಷಣ ಬೇಷರತ್ತಾಗಿ ಬಿಡುಗಡೆ ಮಾಡಿ. ಕೇಂದ್ರ ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಹರಿಪ್ರಸಾದ್ ಒತ್ತಾಯಿಸಿದ್ದಾರೆ.