ಮೂರು ಉಪ ಸಮಿತಿಗಳಿಂದ ವರದಿ ವಿಳಂಬ: ಸಂಪುಟ ಸಭೆಯಲ್ಲಿ ಆಕ್ಷೇಪ
ಬೆಂಗಳೂರು : ಕೋವಿಡ್ ಅಕ್ರಮ, ನೈಸ್ ರಸ್ತೆ ಹಾಗೂ ವಿಶ್ವವಿದ್ಯಾಲಯಗಳ ಆರ್ಥಿಕ ಪರಿಸ್ಥಿತಿಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ನೇಮಿಸಿದ್ದ ಮೂರು ಸಂಪುಟ ಉಪ ಸಮಿತಿಗಳು ವರದಿ ಮಂಡಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಕುರಿತು ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಗಿದೆ.
ಮೂರು ಸಚಿವ ಸಂಪುಟ ಉಪಸಮಿತಿಗಳು 6 ತಿಂಗಳು ಮೀರಿದರೂ ವರದಿಯನ್ನು ಸಲ್ಲಿಸದಿರುವ ಬಗ್ಗೆ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಆದಷ್ಟು ಬೇಗ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಕೋವಿಡ್ ಸಂದರ್ಭದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಗೆ ಸಂಬಂಧಿಸಿದ ಅಕ್ರಮಗಳ ಕುರಿತು ನ್ಯಾ.ಕುನ್ಹಾ ನೇತೃತ್ವದ ಆಯೋಗವು ಸಲ್ಲಿಸಿರುವ ವರದಿ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ವಿಶ್ವವಿದ್ಯಾಲಯಗಳ ಆರ್ಥಿಕ ಪರಿಸ್ಥಿತಿ ಕುರಿತು ವರದಿ ಸಲ್ಲಿಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಂಪುಟ ಉಪ ಸಮಿತಿ ವರದಿ ಸಲ್ಲಿಸಿಲ್ಲ ಎಂದು ಅವರು ಹೇಳಿದರು.
ಅದೇ ರೀತಿ, ಬೆಂಗಳೂರು-ಮೈಸೂರು ಇನ್‍ಫ್ರಾಸ್ಟ್ರಕ್ಚರ್ ಕಾರಿಡಾರ್(ಬಿಎಂಐಸಿ) ಯೋಜನೆಯ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ರಚಿಸಲಾಗಿರುವ ಸಂಪುಟ ಉಪ ಸಮಿತಿ ವರದಿ ಸ್ಲಲಿಸಿಲ್ಲ ಎಂದು ಎಚ್.ಕೆ.ಪಾಟೀಲ್ ಮಾಹಿತಿ ನೀಡಿದರು.
ಸಿಎಂ-ಡಿಸಿಎಂಗೆ ಅಭಿನಂದನೆ : ಮೇಕೆದಾಟು ಯೋಜನೆ ವಿಚಾರದಲ್ಲಿ ಪಾದಯಾತ್ರೆ, ರಾಜಕೀಯ ಹೋರಾಟ ಹಾಗೂ ಕಾನೂನಾತ್ಮಕ ಹೋರಾಟ ಮಾಡಲಾಗಿದೆ. ಯೋಜನೆಯ ವಿರುದ್ಧ ತಮಿಳುನಾಡು ಸರಕಾರ ಸುಪ್ರೀಂ ಕೋರ್ಟ್‍ನಲ್ಲಿ ದಾಖಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸುವ ಮೂಲಕ, ಈ ಯೋಜನೆಗೆ ಮುಂದಿನ ಹೆಜ್ಜೆ ಇಡಲು ಹಸರಿ ನಿಶಾನೆ ತೋರಿಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಲಾಯಿತು ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.