×
Ad

ನಾಳೆ ಸಚಿವ ಸಂಪುಟ ಸಭೆ; ಜಾತಿ ಗಣತಿ ವರದಿ ಕುರಿತು ನಿರ್ಧಾರ?

Update: 2025-05-08 23:30 IST

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚರ್ಚೆಗೊಳಪಡುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ) ವರದಿ ಕುರಿತು ಶುಕ್ರವಾರ(ಮೇ 9) ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.

ಮೇ 2ರಂದು ಸಚಿವ ಸಂಪುಟ ಸಭೆ ನಡೆಸಿ ವರದಿ ಕುರಿತು ನಿರ್ಧರಿಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದರು. ಆದರೆ, ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಭಯೋತ್ಪಾದಕರ ದಾಳಿ ನಡೆದು ಇಬ್ಬರು ಕನ್ನಡಿಗರು ಸೇರಿದಂತೆ 26 ಮಂದಿ ಹತ್ಯೆಗೀಡಾದ ಹಿನ್ನೆಲೆಯಲ್ಲಿ ಸಂಪುಟ ಸಭೆಯನ್ನು ಮೇ 9ಕ್ಕೆ ಮುಂದೂಡಲಾಯಿತು.

ಜಾತಿ ಗಣತಿ ವರದಿಗೆ ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿವೆ. ಅಲ್ಲದೇ, ರಾಜ್ಯ ಸಚಿವ ಸಂಪುಟದಲ್ಲಿರುವ ಹಲವು ಸಚಿವರು ಸಹ ಜಾತಿ ಗಣತಿ ವರದಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಾತಿ ಗಣತಿ ವರದಿಯನ್ನು ಮುಂಬರುವ ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಮಂಡಿಸಿ, ಚರ್ಚೆಗೊಳಪಡಿಸಲು ಸರಕಾರ ಗಂಭೀರವಾಗಿ ಚಿಂತಿಸಿದೆ.

ಆದರೆ, 2026ರಲ್ಲಿ ಜನ ಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸರಕಾರ ನಿರ್ಧಾರ ಕೈಗೊಂಡಿರುವುದರಿಂದ ರಾಜ್ಯ ಸರಕಾರದ ಮುಂದಿನ ನಡೆ ಏನಿರಬೇಕು ಎಂಬುದರ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲು ನಿರ್ಧರಿಸಲಾಗಿದೆ. ಇದೇ ವೇಳೆ ಅಡ್ವೊಕೇಟ್ ಜನರಲ್ ಸೇರಿದಂತೆ ಕಾನೂನು ತಜ್ಞರ ಜೊತೆಯೂ ವರದಿಯ ಸಾಧಕ ಬಾಧಕಗಳ ಕುರಿತು ಚರ್ಚಿಸಿ ಸಲಹೆ ಪಡೆಯಲು ಸರಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News