ಚಡಚಣ : ತಾಲೂಕಿನ ದಸೂರ ಗ್ರಾಮದ ರೈತರ ಜಮೀನಿನಲ್ಲಿ ವಿದ್ಯುತ್ ತಂತಿ ಸ್ಪರ್ಶದಿಂದ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಹತ್ತು ಎಕರೆಗೂ ಅಧಿಕ ಪ್ರದೇಶದ ಕಬ್ಬಿನ ಬೆಳೆ ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾಗೂ ಕೃಷಿ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಬೆಂಕಿ ನಂದಿಸುವ ಪ್ರಯತ್ನದ ವೇಳೆ ಟ್ರ್ಯಾಕ್ಟರ್ ಕೂಡ ಬೆಂಕಿಗೆ ಆಹುತಿಯಾದ ಘಟನೆ ಚಡಚಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ದಸೂರ ಗ್ರಾಮದ ಮಹೇಶ ರೇವಪ್ಪ ಅಂಕಲಗಿ, ಸತೀಶ ನಾರಾಯಣ ಸಿತೋಳೆ ಹಾಗೂ ಮನೋಜ್ ಕುಮಾರ್ ಸಿತೋಳೆ ಅವರಿಗೆ ಸೇರಿದ ಜಮೀನಿನ ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ಸ್ಪರ್ಶದಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಗದ್ದೆಗೆ ವ್ಯಾಪಿಸಿದ್ದು, ಹತ್ತು ಎಕರೆಗೂ ಅಧಿಕ ಪ್ರದೇಶದ ಕಬ್ಬಿನ ಬೆಳೆ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಇದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎನ್ನಲಾಗಿದೆ.

ಜಮೀನಿನ ಅಕ್ಕಪಕ್ಕದಲ್ಲಿದ್ದ ಸ್ಥಳೀಯರು ಬೆಂಕಿ ಕಾಣಿಸಿಕೊಂಡ ತಕ್ಷಣ ಅದನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಬೆಂಕಿ ನಂದಿಸುವ ಕಾರ್ಯಕ್ಕೆ ಬಳಸುತ್ತಿದ್ದ ಟ್ರ್ಯಾಕ್ಟರ್ ಕೂಡ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಹಾನಿಗೀಡಾಗಿದೆ. 

ಚಡಚಣಕ್ಕೆ ಪ್ರತ್ಯೇಕ ಅಗ್ನಿಶಾಮಕ ಠಾಣೆಗೆ ಆಗ್ರಹ

ಚಡಚಣ ತಾಲೂಕಿನಲ್ಲಿ ಅಗ್ನಿ ಅವಘಡಗಳು ಸಂಭವಿಸಿದಾಗ ತುರ್ತು ಸಂದರ್ಭದಲ್ಲಿ ಅಗ್ನಿಶಾಮಕ ಸೇವೆ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ ಎಂಬ ಅಸಮಾಧಾನ ರೈತರಿಂದ ವ್ಯಕ್ತವಾಗಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಳ್ಳಬೇಕಿದೆ. ಆದರೆ ಇಂಡಿಯಿಂದ ಅಗ್ನಿಶಾಮಕ ವಾಹನ ಸ್ಥಳಕ್ಕೆ ತಲುಪುವಷ್ಟರಲ್ಲಿ ಬೆಂಕಿ ವ್ಯಾಪಿಸಿ ಅಪಾರ ಪ್ರಮಾಣದ ನಷ್ಟ ಸಂಭವಿಸುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಡಚಣ ತಾಲೂಕಿಗೆ ಪ್ರತ್ಯೇಕ ಅಗ್ನಿಶಾಮಕ ಠಾಣೆ ಮಂಜೂರು ಮಾಡಬೇಕು. ರೈತರ ಬೆಳೆ, ಕೃಷಿ ಉಪಕರಣಗಳು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಬೆಂಕಿಯಿಂದ ಉಂಟಾಗುವ ಹಾನಿ ತಡೆಯಲು ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು. ಅಗ್ನಿ ಅವಘಡದಿಂದ ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor