ಪರಿಶಿಷ್ಟರ ಮೀಸಲಾತಿ ಹೆಚ್ಚಳ ವಿಚಾರ: ಸಂವಿಧಾನದ 9ನೆ ಅನುಸೂಚಿಯಲ್ಲಿ ಸೇರಿಸಲು ಪ್ರಧಾನಿಗೆ ಪತ್ರ : ಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಿರುವ ತೀರ್ಮಾನವನ್ನು ಸಂವಿಧಾನದ 9ನೆ ಅನುಸೂಚಿಯಲ್ಲಿ ಸೇರಿಸುವ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯಲಾಗುವುದು. ಜತೆಗೆ, ಈ ಬಗ್ಗೆ ಚರ್ಚೆ ನಡೆಸಲು ಕಾಲಾವಕಾಶ ಕೇಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಗುರುವಾರ ಸಂಜೆ ವಿಕಾಸಸೌಧದ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ‘ರಾಜ್ಯ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್’ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಶಾಸಕರು, ಸಚಿವರು, ವಿವಿಧ ನಿಗಮಗಳ ಅಧ್ಯಕ್ಷರುಗಳನ್ನು ಒಳಗೊಂಡಂತೆ ಸಭೆ ನಡೆಸಿದ್ದು, ನಂತರ ಪರಿಷತ್ತಿನ ಸಭೆ ನಡೆಸಿದ್ದೇನೆ. ಬೆಳಗಿನ ಸಭೆಯಲ್ಲಿ ಮೀಸಲಾತಿ ಹೆಚ್ಚಳ, ಒಳ ಮೀಸಲಾತಿ ವಿಚಾರವಾಗಿ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದ್ದು, ನಮ್ಮ ಅರ್ಜಿ ಸ್ವೀಕೃತಗೊಂಡಿದೆ ಎಂದರು.
ಮೀಸಲಾತಿ ಕಾನೂನು ಹೋರಾಟದಲ್ಲಿ ಯಾರು ರಾಜ್ಯದ ಪರವಾಗಿ ವಾದ ಮಾಡಬೇಕು ಹಾಗೂ ಈ ಪ್ರಕರಣದ ಮೇಲ್ವಿಚಾರಣೆಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ ಹಾಗೂ ಸತೀಶ್ ಜಾರಕಿಹೊಳಿ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಮುಂದೆ ಸುಪ್ರೀಂ ಕೋರ್ಟ್‍ನಲ್ಲಿ ನಮಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ, ಸಚಿವರಾದ ರುದ್ರಪ್ಪ ಲಮಾಣಿ, ಟಿ.ರಘುಮೂರ್ತಿ, ಕೆ.ಎಸ್.ಬಸವಂತಪ್ಪ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಇದ್ದರು.