ನರೇಗಾ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿಶೇಷ ಅಧಿವೇಶನ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗುರುವಾರ ನಗರದ ಹೋಟೆಲ್ ಅಶೋಕದಲ್ಲಿ ನಡೆದ ಶಾಸಕರ ಸಭೆಯಲ್ಲಿ ಮಾತನಾಡಿದ ಅವರು, 28 ಕೋಟಿ ದಲಿತರಿಗೆ ಇದರಿಂದ ಅನ್ಯಾಯವಾಗಿದೆ. ನಮ್ಮ ಹೋರಾಟ ತೀವ್ರವಾಗಿ ಇರಬೇಕು. ಬಡವರ ಉದ್ಯೋಗದ ಹಕ್ಕು ಕಸಿದುಕೊಂಡವರಿಗೆ ಪಾಠ ಕಲಿಸಬೇಕು. ಬಡವರು ಆರ್ಥಿಕವಾಗಿ ಸಬಲರಾಗುವುದನ್ನು ಸಂಘ ಪರಿವಾರ ಸಹಿಸುವುದಿಲ್ಲ. ಕಾಂಗ್ರೆಸ್ ಜಾರಿಗೆ ತಂದ ಕಾರ್ಯಕ್ರಮವನ್ನು ರದ್ದು ಮಾಡಿ ಉದ್ಯೋಗದ ಹಕ್ಕು ಕಸಿದುಕೊಂಡಿರುವುದು ಸಂವಿಧಾನ ಬಾಹಿರ ಕೆಲಸ ಎಂದು ಸಿದ್ದರಾಮಯ್ಯ ಹೇಳಿದರು.
ಮನರೇಗಾ ಕಾಯ್ದೆ ಮತ್ತೆ ಜಾರಿ ಆಗುವ ರೀತಿ ಜನಾಂದೋಲನ ನಡೆಯಬೇಕು. ಪ್ರತಿ ಗ್ರಾಪಂ ಸದಸ್ಯ ನರೇಗಾದಲ್ಲಿ ಕೆಲಸ ಮಾಡುತ್ತಿರುವವರನ್ನು ತಲುಪಬೇಕು. ಈ ವಿಷಯದ ಬಗ್ಗೆ ಜನರನ್ನೂ ಜಾಗೃತಗೊಳಿಸುವ ಕೆಲಸವನ್ನು ಶಾಸಕರು ಮಾಡಬೇಕು. ನಮ್ಮ ಹೋರಾಟ ಜನಾಂದೋಲನವಾಗಿ ರೂಪುಗೊಳ್ಳುವಂತಹ ವಾತಾವರಣ ನಿರ್ಮಾಣ ಆಗಬೇಕಿದೆ ಎಂದು ಸಿದ್ದರಾಮಯ್ಯ ಕರೆ ನೀಡಿದರು.
ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಎಲ್ಲ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಮುಖಂಡರು ಭಾಗವಹಿಸಿದ್ದರು.