×
Ad

‘ಕೆಕೆಆರ್ ಡಿಬಿ’ ಕ್ರಿಯಾ ಯೋಜನೆ ಸಮರೋಪಾದಿಯಲ್ಲಿ ಅನುಷ್ಠಾನ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

Update: 2024-01-09 21:57 IST

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಕೆಆರ್ ಡಿಬಿ)ಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಮಂಡಳಿಯಲ್ಲಿ ಪ್ರಸಕ್ತ 2106 ಕೋಟಿ ರೂ.ಲಭ್ಯವಿದೆ. ಸರಕಾರ ಅಧಿಕಾರಕ್ಕೆ ಬಂದ ನಂತರ 757.66 ಕೋಟಿ ರೂ. ವೆಚ್ಚ ಮಾಡಲಾಗಿದೆ, ಈ ಆರ್ಥಿಕ ವರ್ಷಂತ್ಯದ ವೇಳೆಗೆ ಇನ್ನೂ ಒಂದು ಸಾವಿರ ಕೋಟಿ ರೂ. ವೆಚ್ಚ ಆಗುವ ಸಾಧ್ಯತೆಗಳಿವೆ ಎಂದರು.

ಇದಕ್ಕಾಗಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುವಂತೆ, ಮಂಡಳಿಯ ಅಧ್ಯಕ್ಷರು, ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.

ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ. ಹಿನ್ನಡೆ ಕಂಡಿರುವ ಯೋಜನೆಗಳ ತ್ವರಿತ ಅನುಷ್ಠಾನ ಮಾಡಬೇಕು. ಪ್ರಾರಂಭವಾಗದ ಕಾಮಗಾರಿಗಳನ್ನು ಮರುಪರಿಶೀಲನೆ ಮಾಡಿ, ಬದಲಿಸುವ ಮೂಲಕ ಸಕಾಲದಲ್ಲಿ ಅನುದಾನ ವೆಚ್ಚ ಮಾಡುವಂತೆ ಸೂಚಿಸಿದ ಅವರು, ಕಾಮಗಾರಿಗಳ ಅನುಷ್ಠಾನಕ್ಕೆ ನೀಲ ನಕ್ಷೆ ರೂಪಿಸಿ, ಅದರಂತೆ ಕಾರ್ಯನಿರ್ವಹಿಸುವಂತೆ ಅವರು ತಿಳಿಸಿದರು.

ಮುಂದಿನ ವರ್ಷದ ಕ್ರಿಯಾ ಯೋಜನೆಯನ್ನು ಮಾರ್ಚ್ ಅಂತ್ಯದ ಒಳಗೆ ರೂಪಿಸಬೇಕು. ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಅಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಜನಸಂಖ್ಯೆ ಶೇ.50ಕ್ಕೂ ಹೆಚ್ಚು ವಾಸವಿರುವ ಸ್ಥಳಗಳನ್ನು ಅಭಿವೃದ್ಧಿ ಪಡಿಸಬೇಕು. ಪ್ರಗತಿಯಲ್ಲಿರುವ ಕೆಲಸಗಳನ್ನೆಲ್ಲ ಈ ವರ್ಷವೇ ಪೂರ್ಣಗೊಳಿಸಬೇಕು. ಹಿಂದಿನ ವರ್ಷದ ಕಾಮಗಾರಿಗಳನ್ನು ಆದಷ್ಟು ಶೀರ್ಘ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News