×
Ad

ಅಡ್ಡದಾರಿ ಮೂಲಕ ಹಣ ಸಂಗ್ರಹದ ವಿರುದ್ಧ ಆಯೋಗಕ್ಕೆ ದೂರು : ಸುರೇಶ್ ಕುಮಾರ್

Update: 2024-04-07 21:25 IST

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಮೂಲಕ ಚುನಾವಣೆಗೆ ಅಡ್ಡದಾರಿಯಿಂದ ಹಣ ಸಂಗ್ರಹಿಸುವ ಶಂಕೆಯಿದ್ದು, ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಡಲಾಗಿದೆ ಎಂದು ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ರವಿವಾರ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲಿ ಬಿಡಿಎ, ಕಾರಂತ ಬಡಾವಣೆಯಲ್ಲಿನ ಗುತ್ತಿಗೆದಾರರ ಪಾವತಿಗಾಗಿ 1ಸಾವಿರ ಕೋಟಿ ರೂ.ಗಳಿಂದ 2 ಸಾವಿರ ಕೋಟಿ ರೂ.ಬೇಕಿದ್ದು, ಅದಕ್ಕಾಗಿ ಕೆಂಪೇಗೌಡ ಬಡಾವಣೆಯ ಮೂಲ ನಿವೇಶನಗಳನ್ನು ಬ್ಯಾಂಕಿಗೆ ಅಡಮಾನ ಇಟ್ಟು ಹಣ ಪಡೆಯಲು ಹೊರಟಿದ್ದಾರೆ. ನೀತಿ ಸಂಹಿತೆ ಇರುವಾಗ ಇಷ್ಟೊಂದು ಭಾರಿ ಮೊತ್ತ ಪಡೆಯುವುದು ಅನುಮಾನಕ್ಕೆ ಆಸ್ಪದವಾಗಿದೆ. ಗುತ್ತಿಗೆದಾರರಿಗೆ ಈಗಲೇ ಹಣ ಕೊಡಬೇಕೇ? ಅದರ ಹಿಂದೆ ಏನಿದೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷವು ಮೂಲಸೌಕರ್ಯ ಕಾಮಗಾರಿಗಳನ್ನು ಮುಂದುವರೆಸಲು ಗುತ್ತಿಗೆದಾರರಿಗೆ ಪಾವತಿ ನೆಪ ಒಡ್ಡಿ, ಚುನಾವಣಾ ಕಾರ್ಯಕ್ಕೆ ಬಳಸಿಕೊಳ್ಳಲು ಅಡ್ಡದಾರಿಗಳಿಂದ ಹಣದ ವ್ಯವಸ್ಥೆ ಮಾಡಿಕೊಳ್ಳುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಲೋಕಸಭಾ ಚುನಾವಣೆ ಮುಗಿಯುವವರೆಗೆ ಬಿಡಿಎದಿಂದ ಯಾವುದೇ ರೀತಿಯ ಪಾವತಿಗಳು ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ವಿವರಿಸಿದರು. ನೀತಿಸಂಹಿತೆ ಮುಗಿಯುವವರೆಗೆ ಇಂಥ ದುಸ್ಸಾಹಸಕ್ಕೆ ಅವಕಾಶ ಕೊಡಬಾರದೆಂದು ಕೋರಿದ್ದೇವೆ ಎಂದರು.

ಎ.26ರಂದು ನಡೆಯುವ ಚುನಾವಣೆಗೆ ಸಂಬಂಧಿಸಿದ ಮೊದಲ ಹಂತದಲ್ಲಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಕಡೆಯಿಂದ ಪ್ರತಿ ಅಭ್ಯರ್ಥಿಯ ಒಟ್ಟು ಕ್ರಿಮಿನಲ್ ಕೇಸ್ ಎಂಬ ಮಾಹಿತಿ ಇದೆ. ಕಾಂಗ್ರೆಸ್ಸಿನ ಅಭ್ಯರ್ಥಿಗಳ ವಿರುದ್ಧ 18, ಬಿಜೆಪಿ ವಿರುದ್ಧ 10 ಮತ್ತು ಜೆಡಿಎಸ್ ವಿರುದ್ಧ 5 ಕೇಸುಗಳಿವೆ ಎಂದು ವಿವರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News