ರಸ್ತೆ, ರಾಜಕಾಲುವೆ ಕಾಮಗಾರಿಗಳ ತ್ವರಿತವಾಗಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಸೂಚನೆ
ಬೆಂಗಳೂರು : ಜಿಬಿಎ ವ್ಯಾಪ್ತಿಯ ಪಂಚ ನಗರ ಪಾಲಿಕೆಗಳಲ್ಲಿ ಕೈಗೆತ್ತಿಕೊಳ್ಳಲಾಗಿರುವ ರಸ್ತೆ ಅಭಿವೃದ್ಧಿ ಹಾಗೂ ರಾಜಕಾಲುವೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಬುಧವಾರ ನಗರದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು 5 ನಗರ ಪಾಲಿಕೆಗಳ ಹಾಗೂ ಬಿಬಿಎಂಪಿ ಅಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರಕಾರವು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಅನುದಾನ ಒದಗಿಸಿದೆ. ಈ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಭೆ ನಡೆಸಲಾಗಿದೆ ಎಂದರು.
ಮಳೆಗಾಲದಿಂದಾಗಿ ರಸ್ತೆ ಕಾಮಗಾರಿಗಳ ಪ್ರಗತಿಗೆ ಅಡಚಣೆಯಾಗಿತ್ತು. ಇದರ ಜೊತೆಗೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಪ್ರತಿಕೂಲ ಪರಿಸ್ಥಿತಿಯಿಂದಾಗಿ ಟಾರ್ ದರ ಏರಿಕೆಯಾಗಿದ್ದು, ಕಾಮಗಾರಿಗಳ ಮೇಲೂ ಪರಿಣಾಮ ಬೀರಿತ್ತು. ಇದೀಗ ಮಳೆಗಾಲ ಮುಗಿದಿರುವುದರಿಂದ ಸ್ಟಾರ್ ರೇಟ್ ಆಧಾರದಲ್ಲಿ ಡಾಂಬರೀಕರಣಕ್ಕೆ ಹಣ ಪಾವತಿಸಲಾಗುತ್ತಿದೆ. ಆದ್ದರಿಂದ ಎಲ್ಲಾ ಕಾಮಗಾರಿಗಳ ವೇಗವನ್ನು ಹೆಚ್ಚಿಸಿ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಕೃಷ್ಣ ಬೈರೇಗೌಡ ಸೂಚಿಸಿದರು.
ನಗರದಲ್ಲಿ 2,321 ಕೋಟಿ ರೂ. ವೆಚ್ಚದಲ್ಲಿ 130 ಕಿ.ಮೀ. ಉದ್ದದ 88 ವೈಟ್ ಟಾಪಿಂಗ್ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಉದ್ದೇಶ ಹೊಂದಲಾಗಿದ್ದು, ಈ ಪೈಕಿ ಈಗಾಗಲೇ 120 ಕಿ.ಮೀ. ಉದ್ದದ ವೈಟ್ ಟಾಪಿಂಗ್ ಕಾಮಗಾರಿಗಳು ಪ್ರಗತಿಯಲ್ಲಿವೆ. ಸುಮಾರು 20 ರಿಂದ 25 ಕಿ.ಮೀ. ರಸ್ತೆಗಳಲ್ಲಿ ಸಂಚಾರ ದಟ್ಟಣೆಯ ಕಾರಣದಿಂದ ಕಾಮಗಾರಿಗಳಿಗೆ ಅನುಮತಿ ದೊರೆಯುತ್ತಿಲ್ಲ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.
ಸಂಚಾರಕ್ಕೆ ತೊಂದರೆಯಾಗದಂತೆ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ. ಕಾಮಗಾರಿ ನಡೆಸಲು ಅವಕಾಶವಿರುವ ಸ್ಥಳಗಳಲ್ಲಿ ಡಿಸೆಂಬರ್ ವೇಳೆಗೆ ಕೆಲಸ ಪೂರ್ಣಗೊಳಿಸಲಾಗುವುದು. ಕೆಲವು ಕಡೆಗಳಲ್ಲಿ ಜಲಮಂಡಳಿಯ ಕಾಮಗಾರಿಗಳೂ ನಡೆಯುತ್ತಿರುವುದರಿಂದ ಸಮನ್ವಯದೊಂದಿಗೆ ಕೆಲಸ ನಿರ್ವಹಿಸಬೇಕು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.
ಅಲ್ಲದೆ, ಈ ರಸ್ತೆಗಳನ್ನು ದೀರ್ಘಕಾಲ ಬಾಳಿಕೆ ಬರುವಂತೆ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ. ಹೊರ ವರ್ತುಲ ರಸ್ತೆಯ ಅಭಿವೃದ್ಧಿಗಾಗಿ 487 ಕೋಟಿ ರೂ. ಅನುದಾನವನ್ನು ಪ್ರತ್ಯೇಕವಾಗಿ ಮೀಸಲಿಡಲಾಗಿದ್ದು, ರಸ್ತೆಯನ್ನು ಶಾಶ್ವತವಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.
ಒಟ್ಟಾರೆ 2,875 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪೈಕಿ 553 ಕಿ.ಮೀ. ರಸ್ತೆಗಳಿಗೆ ಈಗಾಗಲೇ ಡಾಂಬರೀಕರಣ ಮಾಡಲಾಗಿದೆ. ಬಾಕಿ ಉಳಿದಿರುವ ರಸ್ತೆಗಳಿಗೆ ಡಾಂಬರೀಕರಣ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸುಮಾರು 100ರಿಂದ 200 ಕಿ.ಮೀ. ರಸ್ತೆ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಇನ್ನೂ ಕಾಮಗಾರಿ ಆರಂಭವಾಗದ ಕಡೆಗಳಲ್ಲಿ ಕೂಡಲೇ ಕೆಲಸ ಪ್ರಾರಂಭಿಸಬೇಕು. ಫೆಬ್ರವರಿ ವೇಳೆಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಗುರಿ ಹೊಂದಬೇಕು. ಗುತ್ತಿಗೆದಾರರೊಂದಿಗೆ ಚರ್ಚಿಸಿ, ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಕಾಮಗಾರಿಗಳಿಗೆ ವೇಗ ನೀಡಬೇಕು ಎಂದು ಕೃಷ್ಣ ಬೈರೇಗೌಡ ಸೂಚಿಸಿದರು.
ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ನಡೆಯುತ್ತಿರುವ ಎಲ್ಲಾ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ರಿಮ್ಸ್ ವ್ಯವಸ್ಥೆಯಲ್ಲಿ ಅಳವಡಿಸಿ, ಲೈವ್ ಡೇಟಾ ಲಭ್ಯವಾಗುವಂತೆ ಮಾಡಬೇಕು. ಎಲ್ಲಾ ಮಾಹಿತಿಯನ್ನು ಒಂದೇ ಕಡೆ ವೀಕ್ಷಿಸಲು ಏಕೀಕೃತ ಡ್ಯಾಶ್ಬೋರ್ಡ್ (ಯುನಿಫೈಡ್ ಡ್ಯಾಶ್ಬೋರ್ಡ್) ರೂಪಿಸಬೇಕು. ಮುಂದಿನ ಸಭೆಯ ವೇಳೆಗೆ ಎಲ್ಲಾ ಕಾಮಗಾರಿಗಳ ಮಾಹಿತಿಯನ್ನು ಈ ವ್ಯವಸ್ಥೆಯಡಿ ತರಬೇಕು ಎಂದು ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ತಿಳಿಸಿದರು.
ಜಿಐಎಸ್ ವ್ಯವಸ್ಥೆಯಲ್ಲಿ ಎಲ್ಲಾ ಇಲಾಖೆಗಳ ಮಾಹಿತಿಯನ್ನು ಸಂಯೋಜಿಸಬೇಕು. ಕಾಮಗಾರಿ ಯಾವಾಗ ತೆಗೆದುಕೊಳ್ಳಲಾಗಿದೆ ಎಂಬ ಸಂಪೂರ್ಣ ವಿವರ ಅಲ್ಲಿ ಲಭ್ಯವಿರಬೇಕು. ಕಾಮಗಾರಿಯ ಭೌತಿಕ ಮತ್ತು ಆರ್ಥಿಕ ಪ್ರಗತಿಗೆ ಅನುಗುಣವಾಗಿ ಜಿಐಎಸ್ ಆಧಾರದ ಮೇಲೆ ಸ್ವಯಂಚಾಲಿತವಾಗಿ ಬಿಲ್ ಲೆಕ್ಕಾಚಾರ ಆಗುವ ವ್ಯವಸ್ಥೆ ಜಾರಿಯಾಗಬೇಕು. ಇದಕ್ಕೆ ಪೂರಕವಾಗಿ ಐಎಫ್ಎಂಎಸ್ ತಂತ್ರಾಂಶವನ್ನು ಸಹ ಮೇಲ್ದರ್ಜೆಗೇರಿಸಬೇಕು ಎಂದು ಕೃಷ್ಣ ಬೈರೇಗೌಡ ಸೂಚಿಸಿದರು.
ರಸ್ತೆ ಅಭಿವೃದ್ಧಿಯ ಎಲ್ಲಾ ಕಾಮಗಾರಿಗಳ ಸಂಪೂರ್ಣ ಮಾಹಿತಿಯು ಆನ್ಲೈನ್ನಲ್ಲಿ ಲಭ್ಯವಿರಬೇಕು ಮತ್ತು ನಾಗರಿಕರಿಗೆ ಸುಲಭವಾಗಿ ಸಿಗುವಂತೆ ಪಾರದರ್ಶಕ ವ್ಯವಸ್ಥೆ ಕಲ್ಪಿಸಬೇಕು. ರಸ್ತೆ ಅಭಿವೃದ್ಧಿ ಎಂದರೆ ಕೇವಲ ಡಾಂಬರೀಕರಣಕ್ಕೆ ಸೀಮಿತವಾಗಬಾರದು. ಪಾದಚಾರಿ ಮಾರ್ಗಗಳ ಅಭಿವೃದ್ಧಿ, ಚರಂಡಿಗಳ ಹೂಳು ತೆಗೆಯುವುದು ಸೇರಿದಂತೆ ರಸ್ತೆಗೆ ಸಂಬಂಧಿಸಿದ ಎಲ್ಲಾ ಮೂಲಸೌಕರ್ಯ ಕಾಮಗಾರಿಗಳನ್ನು ಸಮಗ್ರವಾಗಿ ಕೈಗೆತ್ತಿಕೊಳ್ಳಬೇಕು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.
ಭೂಮಾಪಕರ ನೆರವಿನೊಂದಿಗೆ ಸಮೀಕ್ಷೆ ನಡೆಸಿ, ನಗರದಲ್ಲಿ 200 ಕಿ.ಮೀ. ಉದ್ದದ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಇದರ ಜೊತೆಗೆ, ರಾಜಕಾಲುವೆಗಳ ಪಕ್ಕದಲ್ಲಿ ಬಫರ್ ರಸ್ತೆಗಳನ್ನು ನಿರ್ಮಿಸುವ ಕಾರ್ಯವೂ ಪ್ರಗತಿಯಲ್ಲಿದ್ದು, ಇದಕ್ಕಾಗಿ 200 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.
ಮುಂದಿನ 3 ತಿಂಗಳೊಳಗೆ ಡಾಂಬರೀಕರಣ ಹಾಗೂ ವೈಟ್ ಟಾಪಿಂಗ್ ಹೊರತುಪಡಿಸಿ ಕೈಗೆತ್ತಿಕೊಳ್ಳಲಾಗಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು.
ವಾರ್ಡ್ ಒನ್ ಅಭಿಯಾನದಡಿ ರಸ್ತೆ ಗುಂಡಿಗಳನ್ನು ಮುಚ್ಚುವ ಜೊತೆಗೆ ವಾರ್ಡ್ಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ರಸ್ತೆ ದುರಸ್ತಿ, ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಡಿಸೆಂಬರ್ ಅಂತ್ಯದೊಳಗೆ ಅಭಿಯಾನವನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.