ರಾಜ್ಯಪಾಲರ ನಡೆಗೆ ಕಾಂಗ್ರೆಸ್‌ನಿಂದ ಆಕ್ಷೇಪ: ವಿಧಾನಮಂಡಲದಲ್ಲಿ ಗದ್ದಲ
ಭಾಷಣ ಓದಿ ತೆರಳುತ್ತಿದ್ದ ರಾಜ್ಯಪಾಲರನ್ನು ತಡೆಯಲು ಮುಂದಾದ ಕಾಂಗ್ರೆಸ್ ಸದಸ್ಯರು
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಆಗಮಿಸಿ ಕೇವಲ ಒಂದು ಸಾಲಿನ ಭಾಷಣ ಓದಿ ನಿರ್ಗಮಿಸುತ್ತಿದ್ದಂತೆಯೇ ವಿಧಾನಪರಿಷತ್‌ನ ಕಾಂಗ್ರೆಸ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಎಸ್.ರವಿ ಸೇರಿದಂತೆ ಕೆಲವರು ಅವರನ್ನು ತಡೆಯಲು ಮುಂದಾದ ಘಟನೆ ನಡೆಯಿತು.
ಈ ವೇಳೆ ಕಾಂಗ್ರೆಸ್ ಶಾಸಕರು ಹಾಗೂ ಪರಿಷತ್ ಸದಸ್ಯರು ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರಿಂದ ವಿಧಾನಸಭೆಯಲ್ಲಿ ಗದ್ದಲ ಉಂಟಾಯಿತು. ಬಳಿಕ ಸಭಾಧ್ಯಕ್ಷ ಯು.ಟಿ.ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ಬೀಳ್ಕೊಟ್ಟರು.
ರಾಜ್ಯಪಾಲರು ಕಾರಿನಲ್ಲಿ ತೆರಳುತ್ತಿದ್ದಂತೆಯೇ, ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ ಸೇರಿದಂತೆ ಇತರರು ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದರು.
ನಂತರ ಮಾತನಾಡಿದ ಬಿ.ಕೆ. ಹರಿಪ್ರಸಾದ್ ಅವರು, ರಾಜ್ಯಪಾಲರು ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದಂತೆ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದರು.
ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ ಭಾಷಣವನ್ನೇ ಓದಲೇಬೇಕು. ತಾವೇ ಸಿದ್ಧಪಡಿಸಿಕೊಂಡ ಭಾಷಣ ಓದಲು ಅವಕಾಶವಿಲ್ಲ. ರಾಜ್ಯಪಾಲರ ಇಂದಿನ ನಡೆ ಸೂಕ್ತವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವರ್ಷದ ಮೊದಲ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವುದು ಸಂಪ್ರದಾಯ ಮಾತ್ರವಲ್ಲ, ರಾಜ್ಯಪಾಲರ ಸಂವಿಧಾನಾತ್ಮಕ ಕರ್ತವ್ಯವೂ ಆಗಿದೆ. ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ಯಾವುದೇ ರಾಜಕೀಯ ಪಕ್ಷದ ಪ್ರತಿನಿಧಿಯಾಗಿರಬಾರದು. ಆದರೆ ಇಂದು ಅವರು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿ ಸಂವಿಧಾನದ ವಿಧಿಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು.