ರಾಜ್ಯಪಾಲರಿಂದ ಸಂವಿಧಾನ ಉಲ್ಲಂಘನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ
"ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ"
ಸಿದ್ದರಾಮಯ್ಯ
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಓದದೆ, ತಾವೇ ಸಿದ್ಧಪಡಿಸಿಕೊಂಡ ಕೇವಲ ಒಂದು ಪ್ಯಾರಾ ಭಾಷಣವನ್ನು ಓದಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಸಂಕ್ಷಿಪ್ತ ಭಾಷಣ ಮಾಡಿ ನಿರ್ಗಮಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಇದು ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದ್ದು, ಜನಪ್ರತಿನಿಧಿಗಳ ಸದನಕ್ಕೆ ಅವಮಾನವಾಗಿದೆ ಎಂದು ಹೇಳಿದರು.
ಸಂವಿಧಾನಬದ್ಧವಾಗಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನೇ ಓದಲೇಬೇಕಾಗಿತ್ತು. ಆದರೆ ಅದನ್ನು ಪಾಲಿಸದೆ ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಯನ್ನು ನಿರ್ವಹಿಸಿಲ್ಲ ಎಂದು ಆರೋಪಿಸಿದರು.
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರ ಸರ್ಕಾರದ ತಪ್ಪುಗಳನ್ನು ಮುಚ್ಚಿಹಾಕಲು ರಾಜ್ಯಪಾಲರಿಂದ ಬೇರೆ ಭಾಷಣ ಓದಿಸಲಾಗಿದೆ. ಇದು ಸಂವಿಧಾನಬಾಹಿರ ನಡೆ ಎಂದು ಅವರು ಹೇಳಿದರು.
ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಎಲ್ಲ ಶಾಸಕರಿಗೂ ಹಾಗೂ ಪರಿಷತ್ ಸದಸ್ಯರಿಗೂ ವಿತರಿಸಲಾಗಿದೆ. ಕೇಂದ್ರ ಸರ್ಕಾರ ನರೇಗಾ ಕಾಯ್ದೆಯನ್ನು ರದ್ದುಪಡಿಸಿ ವಿಬಿ ಜಿ ರಾಮ್‌ಜಿ ಎಂಬ ಹೊಸ ಕಾಯ್ದೆಯನ್ನು ಜಾರಿಗೆ ತಂದಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ವಿಷಯವನ್ನು ರಾಜ್ಯಪಾಲರ ಭಾಷಣದಲ್ಲಿ ಸೇರಿಸಲಾಗಿತ್ತು. ನರೇಗಾ ಯೋಜನೆಯನ್ನು ಮರುಸ್ಥಾಪಿಸಬೇಕು ಹಾಗೂ ಹೊಸ ಕಾಯ್ದೆಯನ್ನು ರದ್ದುಪಡಿಸಬೇಕು ಎಂಬ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.