ರಾಜ್ಯದಲ್ಲಿ ಹದಗೆಟ್ಟ ಕಾನೂನು ವ್ಯವಸ್ಥೆ, ಜನರಿಗೆ ರಕ್ಷಣೆ ಇಲ್ಲ: ಆರ್.ಅಶೋಕ್ ಆಕ್ರೋಶ
ಆರ್.ಅಶೋಕ್
ಬೆಂಗಳೂರು : ಕರ್ನಾಟಕ ದರೋಡೆ ರಾಜ್ಯವಾಗಿ ಬದಲಾಗಿದ್ದು, ಜನರು ಆತಂಕದಲ್ಲಿ ಬದುಕುತ್ತಿದ್ದಾರೆ. ಜನರ ರಕ್ಷಣೆಯನ್ನು ಮಾಡುವವರೇ ಇಲ್ಲದಂತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೀದರ್‍ನಲ್ಲಿ ಬ್ಯಾಂಕ್‍ನ ಹಣದ ದರೋಡೆ ಹಾಗೂ ಸಿಬ್ಬಂದಿ ಕೊಲೆ ನಡೆದಿದೆ. ಮಂಗಳೂರಿನಲ್ಲಿ ಹಾಲಿವುಡ್ ಸಿನಿಮಾ ಶೈಲಿಯಲ್ಲಿ 15 ಕೋಟಿ ರೂ. ಬ್ಯಾಂಕ್ ಹಣ ಲೂಟಿಯಾಗಿದೆ. ರಾಜ್ಯದ ಪೊಲೀಸರ ಬಗ್ಗೆ ಯಾರಿಗೂ ಭಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪೊಲೀಸ್ ಅಧಿಕಾರಿಗಳ ಮೇಲೆ ಎಷ್ಟು ಹಿಡಿತ ಇದೆ ಎಂದು ಇದರಿಂದ ತಿಳಿಯುತ್ತದೆ. ರಾಜ್ಯದ ಕಾನೂನು ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂದು ಗೊತ್ತಾಗಿದೆ ಎಂದರು.
ಬೇರೆ ರಾಜ್ಯಗಳಿಂದ ಕಳ್ಳರು ಬಂದು ದರೋಡೆ ಮಾಡಿಕೊಂಡು ಬಸ್ಸು, ರೈಲಿನಲ್ಲಿ ಹೋಗುತ್ತಿದ್ದಾರೆ. ಜನರು ಅವರ ರಕ್ಷಣೆಯನ್ನು ಅವರೇ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಪೊಲೀಸರ ಕೈಯಲ್ಲಿ ಪಿಸ್ತೂಲ್ ಇಲ್ಲ. ಆದರೆ, ದರೋಡೆ ಮಾಡುವವರ ಕೈಯಲ್ಲಿ ಆಧುನಿಕ ಶಸ್ತ್ರಾಸ್ತ್ರಗಳಿವೆ ಎಂದು ಆರ್.ಅಶೋಕ್ ಹೇಳಿದರು.
ಲವ್ ಜಿಹಾದ್, ಕೋಮುಗಲಭೆ, ಹಸುಗಳ ಕೆಚ್ಚಲು ಕತ್ತರಿಸಿದ್ದು ಮೊದಲಾದ ಘಟನೆಗಳ ವಿರುದ್ಧ ಕಠಿಣ ಕ್ರಮ ವಹಿಸಲಿಲ್ಲ. ಪೊಲೀಸ್ ಇಲಾಖೆ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದು, ಅಧಿಕಾರಿಗಳು ಸಾಯುತ್ತಿದ್ದಾರೆ. ಇಷ್ಟಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಇಲಾಖೆಯ ಸಭೆ ಕರೆದು ಮಾತನಾಡಿಲ್ಲ. ಡಿ.ಕೆ.ಶಿವಕುಮಾರ್-ಸತೀಶ್ ಜಾರಕಿಹೊಳಿ ಗಲಾಟೆ, ಸಿಎಂ ನಿರ್ಗಮನ ಮೊದಲಾದ ರಾಜಕೀಯದಲ್ಲೇ ಸರಕಾರ ಮುಳುಗಿದೆ. ಹೀಗಾಗಿ ಅಧಿಕಾರಿಗಳಿಗೆ ಕೆಲಸ ಮಾಡಲು ಆಸಕ್ತಿ ಇಲ್ಲ ಎಂದು ಆರ್.ಅಶೋಕ್ ದೂರಿದರು.
ಕರ್ನಾಟಕ ದರೋಡೆಕೋರರ ಸ್ವರ್ಗವಾಗಿರುವುದರಿಂದ ಹೂಡಿಕೆದಾರರು ಮುಂದೆ ಬರುತ್ತಿಲ್ಲ. ಇದು ಪಶ್ಚಿಮ ಬಂಗಾಳದಂತೆಯೇ ಆಗುತ್ತಿದೆ. ಎಲ್ಲರೂ ಆತಂಕದಲ್ಲೇ ಬದುಕುತ್ತಿದ್ದಾರೆ. ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳು ಹೆಚ್ಚಿವೆ, ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಬದುಕಿಗೆ ಗ್ಯಾರಂಟಿ ಇಲ್ಲ. ಇಂತಹ ಪರಿಸ್ಥಿತಿಯಲ್ಲೂ ಸರಕಾರ ದರ ಏರಿಕೆ ಮಾಡುತ್ತಿದೆ. ಒಟ್ಟಾರೆ ಹೇಳಬೇಕೆಂದರೆ ರಾಜ್ಯದಲ್ಲಿ ಸರಕಾರಕ್ಕೆ ಜೀವ ಇಲ್ಲದಂತಾಗಿದೆ ಎಂದು ಆರ್.ಅಶೋಕ್ ಟೀಕಿಸಿದರು.
ಶ್ವೇತಪತ್ರ ಬಿಡುಗಡೆ ಮಾಡಿ..!
ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ, ಸಿಎಂ ಸಿದ್ದರಾಮಯ್ಯ ಎಷ್ಟು ಅನುದಾನ ನೀಡಿದ್ದಾರೆ ಎಂದು ಶ್ವೇತಪತ್ರ ಬಿಡುಗಡೆ ಮಾಡಲಿ. ಬಿಜೆಪಿ ಅವಧಿಯಲ್ಲಿ ಎಷ್ಟು ಸಾಲ ಮಾಡಲಾಗಿದೆ, ಕಾಂಗ್ರೆಸ್ ಅವಧಿಯಲ್ಲಿ 60 ವರ್ಷಗಳಲ್ಲಿ ಎಷ್ಟು ಸಾಲ ಮಾಡಲಾಗಿದೆ ಎಂಬುದನ್ನು ಕೂಡ ತಿಳಿಸಲಿ ಎಂದು ಮುಖ್ಯಮಂತ್ರಿಗಳಿಗೆ ಆರ್.ಅಶೋಕ್ ಸವಾಲೆಸೆದರು.
ಮುಡಾ: ಕ್ಲೀನ್‍ಚಿಟ್‍ಗೆ ಸಿದ್ಧತೆ..!
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ನನಗೆ ಉತ್ತರ ನೀಡಿಲ್ಲ. ಲೋಕಾಯುಕ್ತ ಪೊಲೀಸರು ತನಿಖೆ ಮಾಡಲು ಆಸಕ್ತಿ ತೋರದೆ ಕ್ಲೀನ್‍ಚಿಟ್ ನೀಡಲು ಸಿದ್ಧತೆ ಮಾಡಿಕೊಂಡಿರುವಂತಿದೆ. ಜಾರಿ ನಿರ್ದೇಶನಾಲಯ ಮಧ್ಯವರ್ತಿಗಳ ಹಣವನ್ನು ವಶಕ್ಕೆ ಪಡೆದಿದೆ. ಆದರೆ, ಲೋಕಾಯುಕ್ತ ಪೊಲೀಸರು ಏನೂ ಮಾಡಿಲ್ಲ. ಆದ್ದರಿಂದ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆರ್.ಅಶೋಕ್ ಒತ್ತಾಯಿಸಿದರು.