ಧರ್ಮಸ್ಥಳ ದೂರು: ಡಾ.ಪ್ರಣವ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ ರಾಜ್ಯ ಸರಕಾರ
ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಾಂತಿ
ಬೆಂಗಳೂರು: 'ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 39/2025 ಕಲಂ 211(ಎ), ಬಿ.ಎನ್.ಎಸ್. ಪ್ರಕರಣದ ಸಮಗ್ರ ತನಿಖೆಗೆ ರಾಜ್ಯ ಸರಕಾರವು ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ(ಎಸ್.ಐ.ಟಿ)ವನ್ನು ರಚಿಸಿದೆ.
ಪ್ರಕರಣವನ್ನು ಎಸ್.ಐ.ಟಿ.ಗೆ ವರ್ಗಾಯಿಸಿ ಸರಕಾರ ಶನಿವಾರ(ಜು.19) ಆದೇಶ ಹೊರಡಿಸಿದೆ. ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಡಾ.ಪ್ರಣವ ಮೊಹಾಂತಿ ಅವರನ್ನು ಈ ವಿಶೇಷ ತನಿಖಾ ತಂಡದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ಎಂ.ಎನ್.ಅನುಚೇತ್ | ಸೌಮ್ಯಲತಾ
ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರ್ದೇಶಕ ಎಂ.ಎನ್.ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ಆಯುಕ್ತೆ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಅವರನ್ನು ಸದಸ್ಯರನ್ನಾಗಿ ನಿಯೋಜಿಸಲಾಗಿದೆ.
ಸರಣಿ ಹತ್ಯೆ ಆರೋಪದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಈ ಸಂಬಂಧ ರಾಜ್ಯದ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ/ದಾಖಲಾಗುವ ಎಲ್ಲಾ ಪ್ರಕರಣಗಳ ಸಮಗ್ರ ತನಿಖೆಯನ್ನು ಈ ವಿಶೇಷ ತನಿಖಾ ತಂಡವೇ ನಡೆಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ತನಿಖೆಯ ವರದಿಯನ್ನು ಆದಷ್ಟು ಬೇಗ ಸರಕಾರಕ್ಕೆ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷ ತನಿಖೆಗೆ ವಿಶೇಷ ತಂಡ ರಚಿಸುವಂತೆ ಕೋರಿ ರಾಜ್ಯ ಮಹಿಳಾ ಆಯೋಗವು ಸರಕಾರಕ್ಕೆ ಪತ್ರ ಬರೆದು ಆಗ್ರಹಿಸಿತ್ತು.
ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕವಾದ ಸಾವು/ಕೊಲೆ ಪ್ರಕರಣಗಳು ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪತ್ರದಲ್ಲಿ ಕೋರಿದ್ದರು.
ಪತ್ರದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಸ್ತಾಪಿಸಿರುವ ಅಂಶಗಳು ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್. ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ತನಿಖೆ ಕೈಗೊಳ್ಳಲು ಒಂದು ವಿಶೇಷ ತನಿಖಾ ತಂಡ (Special Investigation Team)ವನ್ನು ರಚಿಸುವುದು ಸೂಕ್ತವೆಂದು ತೀರ್ಮಾನಿಸಿ ಎಸ್.ಐ.ಟಿ. ರಚಿಸಿ ಆದೇಶಿಸಲಾಗಿದೆ ಎಂದು ಸರಕಾರದ ಆದೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಯಾರು ಡಾ.ಪ್ರಣವ ಮೊಹಾಂತಿ?: ಸಿಸಿಬಿ, ಸಿಐಡಿ ಸೇರಿದಂತೆ ಮೂರು ದಶಕಗಳ ಕಾಲ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ ಹಿರಿಯ ಐಪಿಎಸ್ ಅಧಿಕಾರಿ ಡಾ.ಪ್ರಣವ ಮೊಹಾಂ, ಈ ಹಿಂದೆ ಲೋಕಾಯುಕ್ತದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ದ ಭೂಹಗರಣ ಮತ್ತು ಅಕ್ರಮ ಗಣಿಗಾರಿಕೆ ಪ್ರಕರಣಗಳು ದಾಖಲಾಗಿದ್ದ ಸಂದರ್ಭದಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಗೌರಿ ಲಂಕೇಶ್ ಹತ್ಯೆ ಪ್ರಕರಣ ಭೇದಿಸಿದ್ದ ಅನುಚೇತ್: 2017ನೆ ಸಾಲಿನಲ್ಲಿ ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ರಾಜ್ಯ ಸರಕಾರ ರಚಿಸಿದ್ದ ಎಸ್‍ಐಟಿ ತಂಡದಲ್ಲಿಯೂ ಎಂ.ಎನ್.ಅನುಚೇತ್ ಪ್ರಮುಖ ಪಾತ್ರವಹಿಸಿದ್ದರು.
ಗೌರಿ ಲಂಕೇಶ್ ಹಂತಕರನ್ನು ಬಂಧಿಸುವಲ್ಲಿ ಹಾಗೂ ಇಡೀ ಹತ್ಯೆ ಪ್ರಕರಣವನ್ನು ಭೇದಿಸಿದ್ದಕ್ಕಾಗಿ ಕೇಂದ್ರ ಸರಕಾರ ತನಿಖೆಯಲ್ಲಿ ಶ್ರೇಷ್ಠತೆ ಮಾನದಂಡ ಅಡಿಯಲ್ಲಿ ಎಂ.ಎನ್.ಅನುಚೇತ್ ಅವರಿಗೆ ಕೇಂದ್ರ ಗೃಹ ಸಚಿವರ ಪದಕ ಪ್ರದಾನ ಮಾಡಿತ್ತು.