ಅಮೆರಿಕಾ ಪ್ರಜೆಗಳಿಗೆ ಡಿಜಿಟಲ್ ಅರೆಸ್ಟ್ ; ಬೆಂಗಳೂರಿನಲ್ಲಿ 16 ಮಂದಿಯ ಬಂಧನ
ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು, ಅ.14: ಪೊಲೀಸ್ ಅಧಿಕಾರಿ ಸೋಗಿನಲ್ಲಿ ಅಮೆರಿಕಾ ಸೇರಿದಂತೆ ವಿವಿಧ ದೇಶಗಳ ಪ್ರಜೆಗಳಿಗೆ ಕರೆ ಮಾಡಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಬೆದರಿಸಿ ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದ ಆರೋಪದಡಿ 16 ಮಂದಿಯನ್ನು ಇಲ್ಲಿನ ಎಚ್‍ಎಸ್‍ಆರ್ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಎಚ್‍ಎಸ್‍ಆರ್ ಲೆಔಟ್ 27ನೆ ಮುಖ್ಯ ರಸ್ತೆಯಲ್ಲಿ ನಕಲಿ ಬಿಪಿಎಲ್ ಕಂಪೆನಿ ತೆರೆದು ವಿದೇಶಿಯರಿಗೆ ಕರೆ ಮಾಡಿ ವಂಚಿಸುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು ಸುವೋಮೋಟೊ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ 16 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ದಾಳಿ ವೇಳೆ 40ಕ್ಕಿಂತ ಹೆಚ್ಚು ಕಂಪ್ಯೂಟರ್ ಸೇರಿದಂತೆ ಇನ್ನಿತರ ಉಪಕರಣ ಜಪ್ತಿ ಮಾಡಲಾಗಿದೆ. ಬಿಟ್ಸ್ ಸೊಲ್ಯೂಷನ್ ಪ್ರೈ. ಲಿಮಿಟೆಡ್ ಹೆಸರಿನಲ್ಲಿ ಆರೋಪಿಗಳು ಕಳೆದ ಎರಡು ವರ್ಷಗಳ ಹಿಂದೆ ಬಿಪಿಒ ಕಂಪೆನಿ ತೆರೆದಿದ್ದರು. ಕಟ್ಟಡದ ಎರಡು ಮಹಡಿಗಳಲ್ಲಿ ಒಟ್ಟು 20 ರಿಂದ 25 ಮಂದಿ ಉದ್ಯೋಗಿಗಳು ಕೆಲಸ ಮಾಡುತ್ತಿದ್ದರು. ಆನ್‍ಲೈನ್‍ನಲ್ಲಿ ಕೆಲಸವೆಂದು ಹೇಳಿ ಉದ್ಯೋಗಿಗಳನ್ನು ನೇಮಕಾತಿ ಮಾಡಿಕೊಂಡು ಸಾರ್ವಜನಿಕರಿಗೆ ಹೇಗೆ ವಂಚಿಸಬೇಕೆಂದು ತರಬೇತಿ ನೀಡುತ್ತಿದ್ದರು ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಅಮೆರಿಕಾ ಸೇರಿದಂತೆ ವಿವಿಧ ದೇಶಗಳ ಪ್ರಜೆಗಳಿಗೆ ರಾತ್ರಿ ವೇಳೆ ಪೊಲೀಸರು ಸೇರಿದಂತೆ ವಿವಿಧ ತನಿಖಾ ಏಜೆನ್ಸಿಗಳ ಸೋಗಿನಲ್ಲಿ ಕರೆ ಮಾಡಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಬೆದರಿಸಿ ಸಹಾಯ ಮಾಡುವುದಾಗಿ ನಂಬಿಸಿ ವಂಚಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸೈಬರ್ ವಂಚನೆಯ ತರಬೇತಿ ನೀಡಲಾಗಿದ್ದ ಸುಮಾರು 20ರಿಂದ25 ಯುವಕರು ಮತ್ತು ಯುವತಿಯರು ಪತ್ತೆಯಾಗಿದ್ದಾರೆ. ಆರೋಪಿಗಳು ಕೃತ್ಯಕ್ಕೆ ಬಳಕೆ ಮಾಡುತ್ತಿದ್ದ ಕೃತ್ಯದಲ್ಲಿ ಭಾಗಿಯಾಗಿದ್ದ ಮಹಾರಾಷ್ಟ್ರದ 8, ಮೇಘಾಲಯದ 4, ಒಡಿಶಾ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಮತ್ತು ಗುಜರಾತ್‍ನ ತಲಾ ಒಬ್ಬೊಬ್ಬರು ಸೇರಿದಂತೆ ಒಟ್ಟು 16 ಆರೋಪಿಗಳನ್ನ ಬಂಧಿಸಲಾಗಿದೆ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸಾರಾ ಫಾತಿಮಾ ಮಾರ್ಗದರ್ಶನದಲ್ಲಿ, ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಆಯುಕ್ತ ಗೋವರ್ದನ್ ಗೋಪಾಲ್ ರವರ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಹರೀಶ್ ಮತ್ತು ಸಿಇಎನ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಈಶ್ವರಿ ಹಾಗೂ ಎಚ್‍ಎಸ್‍ಆರ್ ಮತ್ತು ಸಿಇಎನ್ ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡಗಳು ಈ ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.