×
Ad

ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು 16 ವರ್ಷ ಮೇಲ್ಪಟ್ಟ ಹೆಣ್ಣುಮಕ್ಕಳಿಗೆ ಲಸಿಕಾ ಕಾರ್ಯಕ್ರಮ: ದಿನೇಶ್ ಗುಂಡೂರಾವ್

Update: 2025-03-15 13:31 IST

ರಾಯಚೂರು : ಮಹಿಳೆಯರಿಗೆ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು 16 ವರ್ಷ ಮೆಲ್ಪಟ್ಟ ಹೆಣ್ಣುಮಕ್ಕಳಿಗೆ ಲಸಿಕೆ‌ ಹಾಕಲು ತೀರ್ಮಾನಿಸಲಾಗಿದ್ದು, ಕೇಂದ್ರ ಸರ್ಕಾರ ಸಹಕಾರ ನೀಡಿ ರಾಷ್ಟ್ರೀಯ ಲಸಿಕಾ ಕಾರ್ಯಕ್ರಮವಾಗಿ ಆರಂಭಿಸಿ ಸಹಕಾರ ನೀಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ವಿವಿಧ ಸಂಘ ಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಮಾನ್ವಿ ಪಟ್ಟಣದ ಬಾಶುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಇಂದು ಆಯೋಜಿಸಿದ್ದ ಬೃಹತ್ ಆರೋಗ್ಯ ಮೇಳದಲ್ಲಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಾಗಿ ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪತ್ತೆಯಾಗುತ್ತಿದೆ. ಮಹಿಳೆಯರು ಸ್ತನ ಕ್ಯಾನ್ಸರ್, ಗರ್ಭಕೋಶ ಕ್ಯಾನ್ಸರ್ ಬೇಗ ಗುರುತಿಸಿಕೊಂಡು ಬೇಗ ಗುಣಪಡಿಸಿಕೊಳ್ಳಬೇಕಿದೆ. ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ರಾಜ್ಯ ಬಜೆಟ್ ನಲ್ಲಿ ಲಸಿಕೆಯ ಘೋಷಣೆ ಮಾಡಲಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ನೆರವು ನೀಡಿ ರಾಷ್ಟ್ರೀಯ ಕಾರ್ಯಕ್ರಮವಾಗಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು.

ಸಣ್ಣ ನೀರಾವರಿ ಸಚಿ ಭೋಸರಾಜು ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಶಿಕ್ಷಣ-ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಅನೇಕ ಬದಲಾವಣೆ ಮಾಡಿದ್ದಾರೆ.‌ ದಿನೇಶ್ ಗುಂಡೂರಾವ್ ಅನೇಕ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 40 ಹೊಸ ಆಸ್ಪತ್ರೆ, ರಾಯಚೂರಿನಲ್ಲಿ ಕ್ಯಾನ್ಸರ್ ವಿಭಾಗಕ್ಕೆ 52 ಕೋಟಿ, ಕಿದ್ವಾಯಿ ಕ್ಯಾನ್ಸರ್‌ ವಿಭಾಗ ಆಸ್ಪತ್ರೆ ಆರಂಭಿಸಿದ್ದಾರೆ ಎಂದು ಹೇಳಿದರು.

ಅಭಿವೃದ್ಧಿಯ ವಿಚಾರದಲ್ಲಿ ರಾಜಕಾರಣ ಮಾಡುವುದು‌‌ ತ‌ಪ್ಪಲ್ಲ:

ಕಾರ್ಯಕ್ರಮದಲ್ಲಿ ಸಂಸದ ಜಿ.ಕುಮಾರ ನಾಯಕ ಮಾತನಾಡಿ, ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂಬ ಮಾತಿದೆ. ‌ಆದರೆ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಮಾಡುವುದು ತಪ್ಪಲ್ಲ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಟ್ರಿಲಿಯನ್ ಡಾಲರ್ ಎಕನಾಮಿ ಹಾಗೂ ಭಾರತವನ್ನು ವಿಶ್ವದ ಮೂರನೇ ಆರ್ಥಿಕತೆ ದೇಶ ಮಾಡುತ್ತೇವೆಂದು ಹೇಳುವ ಮೋದಿ ಬಜೆಟ್ ನಲ್ಲಿ ಆರೋಗ್ಯಕ್ಕೆ ಶೇ.2 ಅನುದಾನ ಮೀಸಲಿಟ್ಟಿದೆ. ಬಾಂಗ್ಲಾದೇಶವನ್ನು ಹೊರತುಪಡಿಸಿ ವಿಶ್ವದ ಅತೀ ಕಡಿಮೆ ಆರೋಗ್ಯಕ್ಕೆ ಅನುದಾನ ಮೀಸಲಿಡುವ ಅಪಖ್ಯಾತಿಗೆ ಗುರಿಯಾಗಿದೆ ಎಂದು ಟೀಕಿಸಿದರು.

ಮಾನ್ವಿ ಶಾಸಕ ಹಂಪಯ್ಯ ನಾಯಕ ಸಾಹುಕಾರ್, ಜಿಲ್ಲಾಧಿಕಾರಿ ನಿತಿಶ್ ಕೆ, ಜಿ.ಪಂ‌ ಸಿಇಒ ರಾಹುಲ್ ತುಕಾರಾಂ ಪಾಂಡ್ವೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಶರಣಬಸವ ಸೇರಿದಂತೆ ಇತರರು ಇದ್ದರು.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News