ʼಕೆಪಿಸಿಸಿ ಅಧ್ಯಕ್ಷ ಸ್ಥಾನʼ ಪಕ್ಷದ ತೀರ್ಮಾನಕ್ಕೆ ಬದ್ಧ: ಡಿ.ಕೆ.ಶಿವಕುಮಾರ್
ಬೆಂಗಳೂರು: ‘ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಸ್ಥಾನದ ವಿಚಾರವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ. ನಾನು ನನ್ನ ಕರ್ತವ್ಯ ಮಾಡಿದ್ದೇನೆ. ನಾನು ಸೇರಿದಂತೆ ಇಲ್ಲಿ ಯಾರೂ ಶಾಶ್ವತವಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನನ್ನ ಕಾಲಾವಧಿಯಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಕಾರ್ಯ ಪೂರ್ಣಗೊಳ್ಳಬೇಕು. ನಾವು ಬೇರೆ ಜವಾಬ್ದಾರಿಗಳನ್ನು ನಿಭಾಯಿಸಬೇಕು. ಪಕ್ಷ ಯಾವಾಗ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆಯೋ ಅದಕ್ಕೆ ನಾವು ಬದ್ಧವಾಗಿದ್ದೇವೆ ಎಂದರು.
‘ಅದು ಇವತ್ತೋ, ನಾಳೆಯೋ, ಐದು ವರ್ಷಗಳ ನಂತರವೋ, 10 ವರ್ಷಗಳ ನಂತರವೋ ಗೊತ್ತಿಲ್ಲ. ಪಕ್ಷಕ್ಕೆ ಹೇಗೆ ನ್ಯಾಯ ಒದಗಿಸಿಕೊಡಬಹುದೋ ನಾನು ನನ್ನ ಪ್ರಯತ್ನ ಮಾಡಿದ್ದೇನೆ. ನಾನು ಯಾವುದೇ ಆತುರದಲ್ಲಿ ಇಲ್ಲ. ಪಕ್ಷದ ತೀರ್ಮಾನದಂತೆ ನಡೆಯುವೆ ಎಂದು ಶಿವಕುಮಾರ್ ಇದೇ ಸಂದರ್ಭದಲ್ಲಿ ತಿಳಿಸಿದರು.
ಶಂಕುಸ್ಥಾಪನೆಗೆ ಆಹ್ವಾನ: ‘ಗಾಂಧೀಜಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ನೂರು ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 100 ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಮುಂದಾಗಿದ್ದು, ಇದರ ಶಂಕುಸ್ಥಾಪನೆಗಾಗಿ ದಿನಾಂಕ ನೀಡುವಂತೆ ನಮ್ಮ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಆಹ್ವಾನ ನೀಡಿದ್ದೇನೆ ಎಂದರು.
ರೇಸ್‍ಕೋರ್ಸ್ ರಸ್ತೆಯಲ್ಲಿನ ಕಚೇರಿ ಸೇರಿದಂತೆ ಬೆಂಗಳೂರಿನಲ್ಲಿ ಒಟ್ಟು 3 ಕಡೆ ಶಂಕುಸ್ಥಾಪನೆ ನೆರವೇರಲಿದೆ. ಬೆಂಗಳೂರಿನ ಕಚೇರಿಗಳನ್ನು ಖುದ್ದಾಗಿ ಶಂಕುಸ್ಥಾಪನೆ ಮಾಡಲಾಗುವುದು, ಉಳಿದ ಕಡೆಗಳ ಕಚೇರಿಯನ್ನು ವರ್ಚುವಲ್ ಮೂಲಕ ಶಂಕುಸ್ಥಾಪನೆ ಮಾಡಲಾಗುವುದು. ಸಂಸತ್ ಅಧಿವೇಶನ ಮುಕ್ತಾಯದ ನಂತರ ದಿನಾಂಕ ನೀಡುವುದಾಗಿ ತಿಳಿಸಿದ್ದಾರೆ ಎಂದು ಶಿವಕುಮಾರ್ ಹೇಳಿದರು.