371(ಜೆ) ಸಮಿತಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯನ್ನೂ ಪರಿಶೀಲಿಸಬೇಕು: ಡಾ.ಅಜಯ್ ಸಿಂಗ್
ಬೆಂಗಳೂರು, ನ.6: ಸಂವಿಧಾನದ ಅನುಚ್ಛೇದ 371(ಜೆ) ಅನುಷ್ಠಾನಕ್ಕೆ ಸಂಬಂಧಿಸಿದ ಸಚಿವ ಸಂಪುಟ ಉಪಸಮಿತಿಯ ಕಾರ್ಯವ್ಯಾಪ್ತಿಯನ್ನು ಕೇವಲ ಸೇವಾ ಜೇಷ್ಠತೆ ಮತ್ತು ಖಾಲಿ ಹುದ್ದೆಗಳ ವಿಚಾರಗಳಿಗೆ ಸೀಮಿತಗೊಳಿಸದೆ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ, ಸಿಬ್ಬಂದಿ ಹಂಚಿಕೆ, ಇಲಾಖಾವಾರು ಅನುದಾನ ಹಾಗೂ ಶಿಕ್ಷಣ-ಆರೋಗ್ಯ ಮೂಲಸೌಕರ್ಯದಲ್ಲಿನ ತಾರತಮ್ಯಗಳನ್ನೂ ಸಮಗ್ರವಾಗಿ ಪರಿಶೀಲಿಸಬೇಕು ಎಂದು ಸಣ್ಣ ನೀರಾವರಿ ಸಚಿವ ಡಾ.ಅಜಯ್ ಸಿಂಗ್ ಹೇಳಿದರು.
ಶುಕ್ರವಾರ ವಿಕಾಸಸೌಧದಲ್ಲಿ ನಡೆದ 371(ಜೆ) ಕುರಿತ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ವಿಷಯ ಮಂಡನೆ ಮಾಡಿದ ಅವರು, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಮೂಲ ಆಶಯವೇ ಪ್ರದೇಶದ ಸಮಗ್ರ ಅಭಿವೃದ್ಧಿ ಮತ್ತು ಸಮಾನ ಅವಕಾಶ ಕಲ್ಪಿಸುವುದಾಗಿದೆ. ಹೀಗಾಗಿ 371(ಜೆ) ಅನುಷ್ಠಾ ನವನ್ನು ಸೇವಾ ವಿಷಯಗಳಿಗೆ ಮಾತ್ರ ಸೀಮಿತಗೊಳಿಸಬಾರದು ಎಂದು ಪ್ರತಿಪಾದಿಸಿದರು.
ಜೇಷ್ಠತಾ ಪಟ್ಟಿಗೆ ಸಂಬಂಧಿಸಿದಂತೆ 2023, 2024 ಮತ್ತು 2025ರಲ್ಲಿ ನಡೆದ ಸಭೆಗಳಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದ್ದರೂ, ಅವುಗಳ ಅನುಷ್ಠಾನದಲ್ಲಿ ವಿಳಂಬವಾಗಿರುವ ವಿಷಯವೂ ಸಭೆಯಲ್ಲಿ ಚರ್ಚೆಗೆ ಬಂದಿತು. ಈ ಹಿಂದಿನ ನಿರ್ಣಯಗಳನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆಗಳು ನಿಗದಿತ ಕಾಲಮಿತಿಯೊಳಗೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು.
ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ರಾಜ್ಯ ಸರಕಾರವು ಪ್ರತಿ ವರ್ಷ 5 ಸಾವಿರ ಕೋಟಿ ರೂ. ವಿಶೇಷ ಅನುದಾನ ಒದಗಿಸುತ್ತಿದ್ದು, ಇದೇ ಮಾದರಿಯಲ್ಲಿ ಕೇಂದ್ರ ಸರಕಾರವೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಲು ಸಮಿತಿಯು ನಿಲುವು ಕೈಗೊಳ್ಳುವಂತೆ ಅಜಯ್ ಧರ್ಮಸಿಂಗ್ ಆಗ್ರಹಿಸಿದರು.
ಬೆಂಗಳೂರು, ಮೈಸೂರು ಮತ್ತು ಬೆಳಗಾವಿ ವಿಭಾಗಗಳಿಗೆ ವಿವಿಧ ಇಲಾಖೆಗಳ ಮೂಲಕ ನೀಡಲಾಗುತ್ತಿರುವ ಅಭಿವೃದ್ಧಿ ಅನುದಾನದ ಅನುಪಾತದಲ್ಲಿಯೇ ಕಲ್ಯಾಣ ಕರ್ನಾಟಕ ವಿಭಾಗಕ್ಕೂ ಆಯಾ ಇಲಾಖಾವಾರು ಸಮಾನ ಅನುದಾನ ಹಂಚಿಕೆ ಆಗಬೇಕು ಎಂದು ಸಚಿವರು ಸಭೆಯ ಗಮನಕ್ಕೆ ತಂದರು.
ವಿವಿಧ ಇಲಾಖೆಗಳು ಕಲ್ಯಾಣ ಕರ್ನಾಟಕದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನವನ್ನು ಬಳಕೆಮಾಡಲು ಕಡ್ಡಾಯವಾಗಿ ಮಂಡಳಿಯ ಗಮನಕ್ಕೆ ತಂದು ಸಂಪುಟ ಸಭೆಯಲ್ಲಿ ಮಂಡಿಸಲು ಕ್ರಮವಹಿಸಲು ಸೂಕ್ತ ನಿರ್ದೇಶನ ನೀಡಲು ಸಭೆಯಲ್ಲಿ ಅವರು ಅಭಿಪ್ರಾಯ ಮಂಡಿಸಿದರು.
ಸಭೆಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಸಚಿವ ಸಂಪುಟ ಉಪಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.