ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದಲ್ಲಿ ಲಭ್ಯವಿರುವ ಜಲಸಂಪನ್ಮೂಲವನ್ನು ಸಮರ್ಥವಾಗಿ ನಿರ್ವಹಿಸುವುದು, ಮಳೆ ನೀರನ್ನು ಸಂರಕ್ಷಿಸುವುದು ಹಾಗೂ ಅಂತರ್ಜಲ ಮಟ್ಟವನ್ನು ವೃದ್ಧಿಸುವ ಉದ್ದೇಶದಿಂದ ಶಿರಪುರ ಮಾದರಿಯಲ್ಲಿ 200 ಕೋಟಿ ರೂ. ವೆಚ್ಚದ ಜಲ ಸಂರಕ್ಷಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಜಯ್ ಸಿಂಗ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಶಿರಪುರ ಮಾದರಿಯಲ್ಲಿ ಸರಣಿ ಚೆಕ್‍ಡ್ಯಾಂಗಳ ನಿರ್ಮಾಣ, ಹಳ್ಳ ಮತ್ತು ನಾಲೆಗಳ ಆಳ ಹಾಗೂ ಅಗಲ ಹೆಚ್ಚಿಸುವುದು, ಅಂತರ್ಜಲ ಮರುಪೂರಣ ಘಟಕಗಳ ನಿರ್ಮಾಣ ಮತ್ತು ಕೆರೆಗಳ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಳೆ ನೀರು ವ್ಯರ್ಥವಾಗಿ ಹರಿದುಹೋಗುವುದನ್ನು ತಡೆದು, ಸ್ಥಳೀಯವಾಗಿಯೇ ಸಂಗ್ರಹಿಸಿ ಭೂಮಿಯಲ್ಲಿ ಇಂಗುವಂತೆ ಮಾಡುವುದು ಶಿರಪುರ ಮಾದರಿಯ ಪ್ರಮುಖ ಉದ್ದೇಶವಾಗಿದೆ. ಇದರಿಂದ ಅಂತರ್ಜಲ ಮಟ್ಟ ವೃದ್ಧಿಯಾಗುವುದರ ಜೊತೆಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಕೊಳವೆಬಾವಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಈ ಕಾಮಗಾರಿಗಳು ಸಹಕಾರಿಯಾಗಲಿವೆ ಎಂದು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಗೆ 49.20 ಕೋಟಿ ರೂ., ರಾಯಚೂರು ಜಿಲ್ಲೆಗೆ 38.80 ಕೋಟಿ ರೂ., ಬಳ್ಳಾರಿ ಜಿಲ್ಲೆಗೆ 35 ಕೋಟಿ ರೂ., ಯಾದಗಿರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಿಗೆ ತಲಾ 21 ಕೋಟಿ ರೂ., ಮತ್ತು ಬೀದರ್ ಜಿಲ್ಲೆಗೆ 14 ಕೋಟಿ ರೂ. ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ತಲಾ 100 ಕೋಟಿ ರೂ. ಅನುದಾನ ನೀಡಿದ್ದು, ಒಟ್ಟಾರೆಯಾಗಿ 200 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮಾಳಿಂಗರಾಯ ಕೆಂಭಾವಿ/ವಾರ್ತಾಭಾರತಿ

contributor

ಮಾಳಿಂಗರಾಯ ಕೆಂಭಾವಿ ಅವರು ತುಮಕೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ, ಐಚ್ಛಿಕ ಕನ್ನಡ, ರಾಜ್ಯಶಾಸ್ತ್ರ ವಿಷಯಗಳಲ್ಲಿ ಪದವಿ ಹಾಗೂ ಪತ್ರಿಕೋದ್ಯಮ ಡಿಪ್ಲೊಮಾ ಪಡೆದಿದ್ದು, ವಾರ್ತಾಭಾರತಿ ಕನ್ನಡ ದೈನಿಕದಲ್ಲಿ 2023ರಿಂದ ಉಪಸಂಪಾದಕ, ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ಸಿನೆಮಾ ವಿಮರ್ಶೆ ಬರೆಯುವುದು ಇವರ ಹವ್ಯಾಸವಾಗಿದೆ.