ಬೆಂಗಳೂರು ಸೈಬರ್ ಕ್ರೈಂ ಅಡ್ಡೆಯಾಗಲು ಬಿಡಬಾರದು : ಡಾ.ಜಿ.ಪರಮೇಶ್ವರ್
ಬೆಂಗಳೂರು : ಬೆಂಗಳೂರು ನಗರವನ್ನು ಇಡೀ ವಿಶ್ವವೇ ಗಮನಿಸುತ್ತಿದೆ. ಬೆಂಗಳೂರು ನಗರ ಸೈಬರ್ ಕ್ರೈಂ ಅಡ್ಡೆಯಾಗುವುದಕ್ಕೆ ಆಸ್ಪದ ನೀಡಬಾರದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಶನಿವಾರ ನಗರದ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಪಾಲ್ಗೊಂಡು, ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಇತ್ತೀಚೆಗಿನ ಕೆಲವು ಸೈಬರ್ ಕ್ರೈಂ ಪ್ರಕರಣಗಳಲ್ಲಿ ಪ್ರಶಂಸನೀಯವಾಗಿ ಕೆಲಸ ಮಾಡಲಾಗಿದೆ. ಪೊಲೀಸ್ ಇಲಾಖೆಯು ತಾಂತ್ರಿಕವಾಗಿ ಮತ್ತಷ್ಟು ಬಲಪಡಿಸಬೇಕಿದೆ. ಈ ನಿಟ್ಟಿನಲ್ಲಿ ಸರಕಾರವು ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದು ಪರಮೇಶ್ವರ್ ಹೇಳಿದರು.
ಡ್ರಗ್ಸ್ ದಂಧೆ ಮತ್ತು ಸೈಬರ್ ಅಪರಾಧಗಳನ್ನು ಮಟ್ಟ ಹಾಕಲು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ. ಪೊಲೀಸರ ನಿರಂತರ ಕಾರ್ಯಾಚರಣೆ ನಡುವೆಯೂ ರಾಜ್ಯದಲ್ಲಿ ಡ್ರಗ್ಸ್ ಚಟುವಟಿಕೆಗಳು ಯಥೇಚ್ಛವಾಗಿ ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಅಲ್ಲದೇ, ಸೈಬರ್ ಕ್ರೈಂ ಹಾವಳಿಯು ಹೆಚ್ಚಾಗುತ್ತಿದೆ ಎಂದು ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.
ಸೈಬರ್ ಕ್ರೈಂ ಹಾವಳಿ ಮತ್ರು ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕುವ ಉದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ಪ್ರತ್ಯೇಕ ವಿಭಾಗಗಳನ್ನು ಸ್ಥಾಪಿಸಲಾಗಿದೆ. ಈ ವಿಚಾರದಲ್ಲಿ ಸರಕಾರದ ನಿರೀಕ್ಷೆಯ ಮಟ್ಟಕ್ಕೆ ಕೆಲಸ ಮಾಡುತ್ತಿಲ್ಲ. ಇದನ್ನು ನಿರ್ಲಕ್ಷಿಸದೇ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಪರಮೇಶ್ವರ್ ತಿಳಿಸಿದರು.
ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆಯನ್ನು ನಿರ್ಲಕ್ಷ್ಯಿಸಲಾಗುತ್ತಿದೆ. ಪ್ರಕರಣದ ತಪ್ಪಿತಸ್ಥರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದರೆ ಸಾಲುವುದಿಲ್ಲ. ತಪ್ಪಿತಸ್ಥರು ಶಿಕ್ಷೆಯಿಂದ ಪಾರಾಗುತ್ತಿದ್ದಾರೆ. ನೊಂದವರಿಗೆ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಆಗಬೇಕು ಎಂದು ಪರಮೇಶ್ವರ್ ಹೇಳಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಬಿ.ಬಿ.ಕಾವೇರಿ ಮತ್ತಿತರರು ಉಪಸ್ಥಿತರಿದ್ದರು.