ಮೈಸೂರಿನ ವೈದ್ಯಕೀಯ ಕಾಲೇಜು ಅಡಿಯಲ್ಲಿನ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆ ಸಾಮರ್ಥ್ಯ ಹೆಚ್ಚಿಸಲು ಕ್ರಮ : ಡಾ.ಶರಣಪ್ರಕಾಶ್ ಪಾಟೀಲ್
ಬೆಂಗಳೂರು : ಮೈಸೂರಿನ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಅಡಿಯಲ್ಲಿ ಬರುವ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆ ಸಾಮರ್ಥ್ಯ ವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಸೋಮವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಶಿವಕುಮಾರ್ ಕೆ. ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವ ಆಸ್ಪತ್ರೆಗಳ ಮೂಲಸೌಕರ್ಯ ಬಲವರ್ಧನೆ, ಸಿಬ್ಬಂದಿ ನೇಮಕಾತಿ ಮತ್ತು ಹೊಸ ಕಟ್ಟಡ ನಿರ್ಮಾಣ ಕಾರ್ಯಗಳಿಗೆ ಸರಕಾರವು ಹೆಚ್ಚಿನ ಒತ್ತು ನೀಡಿದ್ದು, ಎಂಎಂಸಿಆರ್ ಅಡಿಯಲ್ಲಿ ಒಟ್ಟು 37 ವಿಭಾಗಗಳು ಕಾರ್ಯನಿರ್ವಹಿಸುತ್ತಿವೆ. ಎಂಎಂಸಿಆರ್‍ಐ ಕಾಲೇಜು 8, ಕೆ.ಆರ್. ಆಸ್ಪತ್ರೆ 10, ಚೆಲುವಾಂಬ ಆಸ್ಪತ್ರೆ 3, ಪಿಕೆಟಿಬಿ ಮತ್ತು ಸಿಡಿ ಆಸ್ಪತ್ರೆ 2 ವಿಭಾಗಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ 12 ವಿಭಾಗಗಳು, ಟ್ರಾ ಮಾ ಕೇರ್ ಸೆಂಟರ್ 2 ವಿಭಾಗಗಳು ಕಾರ್ಯನಿರ್ವಹಿಸುತ್ತಿವೆ ಎಂದರು.
ಸಂಸ್ಥೆಯಲ್ಲಿ ಒಟ್ಟು 445 ಮಂಜೂರಾದ ಹುದ್ದೆಗಳಿದ್ದು, ಅದರಲ್ಲಿ 328 ಹುದ್ದೆ ಗಳು ಭರ್ತಿಯಾಗಿವೆ. ಖಾಯಂ ವೈದ್ಯರು- 229, ಗುತ್ತಿಗೆ ಆಧಾರಿತ ವೈದ್ಯರು- 84 ಮತ್ತು ಒಂದು ವರ್ಷದ ಕಡ್ಡಾಯ ಸೇವೆ- 15, ಖಾಲಿ ಹುದ್ದೆಗಳು 117 ಇವೆ ಎಂದು ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ಸಂಸ್ಥೆಯ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 2,150 ಹಾಸಿಗೆಗಳು ಲಭ್ಯವಿದ್ದು, ದೈನಂದಿನ ಒಳರೋಗಿ(ಐಪಿಡಿ) ಮತ್ತು ಹೊರರೋಗಿ(ಒಪಿಡಿ) ಸೇವೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲಾಗುತ್ತಿದೆ. ವೈದ್ಯರು ಮತ್ತು ಹಾಸಿಗೆಗಳ ಸಂಖ್ಯೆಯು ಸದ್ಯದ ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಸಮರ್ಪಕವಾಗಿದೆ. ಮೈಸೂರು ವೈದ್ಯಕೀಯ ಕಾಲೇಜಿನ ಶತಮಾನೋತ್ಸವದ ನೆನಪಿಗಾಗಿ ಸರಕಾರವು ವಿಶೇಷ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದು, ಕೆ.ಆರ್.ಆಸ್ಪತ್ರೆ ಆವರಣದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನಲ್ಲಿ ಸುಸಜ್ಜಿತ ಹೊಸ ಹೊರರೋಗಿ ಕಟ್ಟಡ ನಿರ್ಮಾಣಕ್ಕೆ 75 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಈ ಕಾಮಗಾರಿಗೆ 12.07.2024ರಂದು ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಶರಣಪ್ರಕಾಶ್ ಪಾಟೀಲ್ ಹೇಳಿದರು.
ಇದಕ್ಕೂ ಮೊದಲು ಮಾತನಾಡಿದ ಸದಸ್ಯ ಶಿವಕುಮಾರ್ ಕೆ, ಡಯಾಲಿಸಿಸ್ ಸೌಲಭ್ಯ ಸರಿಯಾಗಿ ಸಿಗುತ್ತಿಲ್ಲ. ಚಲುವಾಂಬ ಆಸ್ಪತ್ರೆಯಲ್ಲಿ ಒಂದು ಹಾಸಿಗೆಯಲ್ಲೇ ಎರಡ್ಮೂರು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಿಶುಮರಣ ದರವು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿಗೆ ಇದೆ. ವೈದ್ಯಕೀಯ ಸೌಲಭ್ಯಗಳನ್ನು ಉತ್ತಮಪಡಿಸಬೇಕು ಎಂದು ಆಗ್ರಹಿಸಿದರು.