ಕೃಷ್ಣ, ಭೀಮಾ ನದಿ ತೀರದಲ್ಲಿ ಪ್ರವಾಹದ ಸ್ಥಿತಿ: ತೀವ್ರ ರಕ್ಷಣಾ, ಪರಿಹಾರ ಕಾರ್ಯಕ್ಕೆ ಸಿಎಂ ಸೂಚನೆ
ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಠಿ ಮತ್ತು ಮಹಾರಾಷ್ಟ್ರದ ಉಜನಿ ಹಾಗೂ ನೀರ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರಬಿದ್ದ ಪರಿಣಾಮ, ಭೀಮಾ ನದಿ ತೀರ ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಿ, ಅಗತ್ಯ ರಕ್ಷಣಾ ಮತ್ತು ಪರಿಹಾರ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸಿಇಒಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ, ಅಗತ್ಯ ಕ್ರಮಗಳನ್ನು ಸೂಚಿಸಬೇಕು ಎಂದಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯದಲ್ಲಿ ಸಹಕರಿಸಬೇಕು. ಮಾನವ, ಪಶು-ಪ್ರಾಣಿ ಜೀವ ಹಾನಿ ತಪ್ಪಿಸಲು ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸಂತ್ರಸ್ಥರಿಗೆ ಆಹಾರ, ಪಶು-ಪ್ರಾಣಿಗಳಿಗೆ ಮೇವು ಹಾಗೂ ತಾತ್ಕಾಲಿಕ ವಸತಿಪೀಠಗಳನ್ನು ಕಲ್ಪಿಸುವಂತೆ ಸೂಚಿಸಲಾಗಿದೆ.