ಕೃಷ್ಣ ಬೈರೇಗೌಡ

ಬೆಂಗಳೂರು : ಕೋಣನಕುಂಟೆ ಕ್ರಾಸ್‍ನಲ್ಲಿ ಸಂಚಾರ ದಟ್ಟಣೆ ನಿವಾರಿಸುವ ಉದ್ದೇಶದಿಂದ ಮೇಲ್ಸೇತುವೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಪ್ರಸ್ತುತ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಶನಿವಾರ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೂರನೇ ಹಂತದ ವಾರ್ಡ್ ಒನ್ ಅಭಿಯಾನಕ್ಕೆ ಕೋಣನಕುಂಟೆ ಕ್ರಾಸ್‍ನಲ್ಲಿ ಗೋಡೆಗೆ ಬಣ್ಣ ಬಳಿಯುವ ಮೂಲಕ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕೋಣನಕುಂಟೆ ಕ್ರಾಸ್‍ನಲ್ಲಿ ತಾತ್ಕಾಲಿಕ ಪರಿಹಾರಗಳ ಜೊತೆಗೆ ದೀರ್ಘಕಾಲೀನ ಪರಿಹಾರಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಬಿ-ಸ್ಮೈ ವತಿಯಿಂದ ಮೇಲ್ಸೇತುವೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಎರಡೂ ಬದಿಯಲ್ಲಿ ಸುಮಾರು 600 ಮೀಟರ್ ಉದ್ದದ ಮೇಲ್ಸೇತುವೆಯನ್ನು ಸ್ಪ್ಲಿಟ್ ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಮೇಲ್ಸೇತುವೆ ನಿರ್ಮಾಣ ಹಾಗೂ ಭೂಸ್ವಾಧೀನ ಸೇರಿದಂತೆ ಸುಮಾರು 77 ಕೋಟಿ ರೂ. ವೆಚ್ಚವಾಗುವ ನಿರೀಕ್ಷೆಯಿದ್ದು, ಕಾಮಗಾರಿ ಕೈಗೆತ್ತಿಕೊಳ್ಳಲು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೇಲ್ಸೇತುವೆ ನಿರ್ಮಾಣದಿಂದ ಈ ಭಾಗದಲ್ಲಿ ಸಿಗ್ನಲ್ ಮುಕ್ತ ಸಂಚಾರಕ್ಕೆ ಅವಕಾಶವಾಗಲಿದ್ದು, ಪ್ರಸ್ತುತ ಎದುರಾಗುತ್ತಿರುವ ಸಂಚಾರ ದಟ್ಟಣೆಯನ್ನು ನಿವಾರಿಸಲು ಸಾಧ್ಯವಾಗಲಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಕೋಣನಕುಂಟೆ ಕ್ರಾಸ್‍ನಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಸಾರ್ವಜನಿಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣದ ಪರಿಹಾರ ಕ್ರಮವಾಗಿ ಪಾದಚಾರಿ ಮಾರ್ಗಗಳನ್ನು ಅಭಿವೃದ್ಧಿಪಡಿಸುವುದು, ಜೀಬ್ರಾ ಕ್ರಾಸಿಂಗ್, ರಸ್ತೆ ಲೈನ್ ಮಾರ್ಕಿಂಗ್ ಹಾಗೂ ಸೈಡ್ ಮಾರ್ಕಿಂಗ್ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಇದರ ಜೊತೆಗೆ ವಾಹನಗಳ ಸುಗಮ ಸಂಚಾರಕ್ಕಾಗಿ ಫೋರಂ ಮಾಲ್ ಸಮೀಪ ಮೆಟ್ರೋಗೆ ಸೇರಿದ ಜಾಗವನ್ನು ಪಡೆದು ಫ್ರೀ ಲೆಫ್ಟ್ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾದಚಾರಿ ಮಾರ್ಗವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದರ ಜೊತೆಗೆ, ಮಾಲ್ ಮುಂಭಾಗದಲ್ಲಿ ಅಡ್ಡಲಾಗಿ ನಿರ್ಮಿಸಿರುವ ತಡೆಗೋಡೆಯನ್ನು ಕೂಡಲೇ ತೆರವುಗೊಳಿಸುವಂತೆ ಸೂಚಿಸಲಾಗಿದೆ. ಇದೇ ಸ್ಥಳದಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕಾಗಿ ಮೆಟ್ಟಿಲುಗಳನ್ನು ನಿರ್ಮಿಸುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ವಾರ್ಡ್ ಒನ್ ಅಭಿಯಾನದಡಿ ಆಯಾ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ವಾರ್ಡ್‍ಗಳನ್ನು ಆಯ್ಕೆ ಮಾಡಿಕೊಂಡು, ಅಲ್ಲಿನ ರಸ್ತೆ, ಪಾದಚಾರಿ ಮಾರ್ಗ, ವಿದ್ಯುತ್ ಸಮಸ್ಯೆ, ಮರಗಳ ಕೊಂಬೆಗಳ ತೆರವು, ರಸ್ತೆ ಗುಂಡಿಗಳು ಹಾಗೂ ಕಸದ ಸಮಸ್ಯೆ ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳನ್ನು ಗುರುತಿಸಿ, ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಹಾಗೂ ಸಂಸ್ಥೆಗಳ ಸಮನ್ವಯದೊಂದಿಗೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ನವೆಂಬರ್ 1ರಿಂದ ಅಭಿಯಾನ ಆರಂಭಿಸಲಾಗಿದ್ದು, ಇಂದು ಮೂರನೇ ಹಂತದ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಮೊದಲ ಹಂತದಲ್ಲಿ 43 ವಾರ್ಡ್‍ಗಳು, ಎರಡನೇ ಹಂತದಲ್ಲಿ 40 ವಾರ್ಡ್‍ಗಳು ಹಾಗೂ ಮೂರನೇ ಹಂತದಲ್ಲಿ 41 ವಾರ್ಡ್‍ಗಳಲ್ಲಿ ಸ್ವಚ್ಛತಾ ಕಾರ್ಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಜಿಬಿಎ ವ್ಯಾಪ್ತಿಯಲ್ಲಿ ಒಟ್ಟು 369 ವಾರ್ಡ್‍ಗಳಿದ್ದು, ನವೆಂಬರ್ ತಿಂಗಳಲ್ಲೇ ಅಭಿಯಾನ ಪೂರ್ಣಗೊಳಿಸಲು ಯೋಜಿಸಲಾಗಿತ್ತು. ಆದರೆ, ತಳಮಟ್ಟದಲ್ಲಿ ಸ್ವಚ್ಚತಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಲು ಹೆಚ್ಚಿನ ಸಮಯದ ಅಗತ್ಯವಿರುವುದರಿಂದ ಅಭಿಯಾನವನ್ನು ಡಿಸೆಂಬರ್ ತಿಂಗಳಲ್ಲಿಯೂ ಮುಂದುವರಿಸಲಾಗುವುದು ಎಂದು ಕೃಷ್ಣ ಬೈರೇಗೌಡ ಹೇಳಿದರು.

ಕೋಣನಕುಂಟೆ ಕ್ರಾಸ್‍ನಲ್ಲಿ ಮೆಟ್ರೋ ನಿಲ್ದಾಣ ನಿರ್ಮಾಣವಾಗುತ್ತಿರುವುದರಿಂದ ಸಾರ್ವಜನಿಕರ ಓಡಾಟ ಹೆಚ್ಚಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಯಾವುದೇ ಅಡಚಣೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಮೇಲ್ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಈ ವೇಳೆ ಸ್ಥಳೀಯ ಶಾಸಕ ಕೃಷ್ಣಪ್ಪ, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ನಗರ ಪಾಲಿಕೆ ಆಯುಕ್ತ ರಮೇಶ್ ಕೆ.ಎನ್., ಅಪರ ಆಯುಕ್ತ ನವೀನ್ ಕುಮಾರ್ ರಾಜು, ಮುಖ್ಯ ಇಂಜಿನಿಯರ್‍ಗಳಾದ ಬಸವರಾಜ್ ಕಬಾಡೆ, ಲೋಕೇಶ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಯೋಗೇಶ್ ಮಲ್ಲೂರು/ವಾರ್ತಾಭಾರತಿ

contributor

ಯೋಗೇಶ್ ಮಲ್ಲೂರು ಅವರು ವಾರ್ತಾಭಾರತಿ ದಿನಪತ್ರಿಕೆಯ ಬೆಂಗಳೂರು ಬ್ಯೂರೋದಲ್ಲಿ ವರದಿಗಾರ/ಉಪಸಂಪಾದಕ. ಮೂಲತಃ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಲ್ಲೂರಿನವರಾದ ಯೋಗೇಶ್, ತುಮಕೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಪದವಿ ಪಡೆದಿದ್ದಾರೆ. ಇವರು ಹಲವು ದಿನಪತ್ರಿಕೆಗಳು ಹಾಗೂ ಡಿಜಿಟಲ್ ಸುದ್ದಿ ಮಾಧ್ಯಮಗಳಲ್ಲಿ ಕ್ರೈಂ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ಒಟ್ಟಾರೆ, ಪತ್ರಿಕೋದ್ಯಮ ವಲಯದಲ್ಲಿ ಬೆಂಗಳೂರು, ತುಮಕೂರಿನಲ್ಲಿ ಯೋಗೇಶ್ ಅವರಿಗೆ 7 ವರ್ಷಗಳ ಅನುಭವವಿದೆ.