ಆಸಿಡ್ ದಾಳಿ ಸಂತ್ರಸ್ತರ ಪುನರ್ವಸತಿ ಮತ್ತು ಪರಿಹಾರಕ್ಕೆ ಸರಕಾರ ಬದ್ಧ : ಜಿ.ಪರಮೇಶ್ವರ್
ಬೆಂಗಳೂರು : ಆಸಿಡ್ ದಾಳಿಯಂತಹ ಅಮಾನವೀಯ ಕೃತ್ಯಗಳ ಸಂತ್ರಸ್ತರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಮತ್ತು ಅವರ ಬದುಕನ್ನು ಮತ್ತೆ ಕಟ್ಟಿಕೊಡಲು ಕರ್ನಾಟಕ ಸರಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್‍ನ ಮಾರ್ಗದರ್ಶನದಂತೆ ಸರಕಾರವು ಹಲವು ಪ್ರಮುಖ ಕ್ರಮಗಳನ್ನು ಕೈಗೊಂಡಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.
ಮಂಗಳವಾರ ಪರಿಷತ್ತಿನ ಕಲಾಪದ ವೇಳೆ ಕಾಂಗ್ರೆಸ್‍ನ ಸದಸ್ಯ ಶಿವಕುಮಾರ್ ಕೆ. ಅವರ ಗಮನ ಸೆಳೆಯುವ ಸೂಚನೆಗೆ ಪ್ರತಿಕ್ರಿಯಿಸಿದ ಸಚಿವರು, ಸುಪ್ರೀಂ ಕೋರ್ಟ್‍ನ ಆದೇಶದಂತೆ, ರಾಜ್ಯ ಸರಕಾರವು ಸಂತ್ರಸ್ತರಿಗೆ ಆರ್ಥಿಕ ಪರಿಹಾರವನ್ನು ಘೋಷಿಸಿದೆ. ಘಟನೆಯ ತೀವ್ರತೆಯನ್ನು ಆಧರಿಸಿ ತಕ್ಷಣದ ನೆರವು ಮತ್ತು ಮುಂದಿನ ಚಿಕಿತ್ಸೆಗಾಗಿ ಅಗತ್ಯವಿರುವ ಪರಿಹಾರ ಮೊತ್ತವನ್ನು ಸಂತ್ರಸ್ತರ ಕುಟುಂಬಗಳಿಗೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದ ಯಾವುದೇ ಸರಕಾರಿ ಅಥವಾ ಸರಕಾರದಿಂದ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳಲ್ಲಿ ಆಸಿಡ್ ದಾಳಿಯ ಸಂತ್ರಸ್ತರಿಗೆ ಸಂಪೂರ್ಣ ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ನೀಡಬೇಕು ಎಂಬ ನಿಯಮ ಇದೆ. ಇದರಲ್ಲಿ ಶಸ್ತ್ರಚಿಕಿತ್ಸೆ, ಔಷಧಿಗಳು ಮತ್ತು ದೀರ್ಘಕಾಲೀನ ಪುನರ್ವಸತಿ ವೆಚ್ಚಗಳು ಸೇರಿವೆ ಎಂದು ಅವರು ತಿಳಿಸಿದರು.
ಸುಪ್ರೀಂ ಕೋರ್ಟ್‍ನ ಇತ್ತೀಚಿನ ನಿರ್ದೇಶನದಂತೆ, ಸಂತ್ರಸ್ತರಿಗೆ ಸರಕಾರಿ ಅಥವಾ ಸರಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುವ ಕುರಿತು ಸರಕಾರವು ನೀತಿ ರೂಪಿಸುತ್ತಿದೆ. ಒಂದು ವೇಳೆ ಉದ್ಯೋಗ ನೀಡಲು ತಾಂತ್ರಿಕ ಅಡಚಣೆಗಳಿದ್ದರೆ, ಸಂತ್ರಸ್ತರಿಗೆ ಬದುಕನ್ನು ನಿರ್ವಹಿಸಲು ಸಹಾಯವಾಗುವಂತಹ ಮಾಸಿಕ ಗೌರವಧನ ಒದಗಿಸುವ ಕುರಿತಾದ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.
ಇದೇ ವೇಳೆ ಕಾರ್ಮಿಕ ಇಲಾಖೆಯ ಸಚಿವ ಸಂತೋಷ್ ಲಾಡ್ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ಎರಡು ಲಕ್ಷ ರೂಪಾಯಿ ಪರಿಹಾರ ನೀಡುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದರು.
ಆಸಿಡ್ ಸಂತ್ರಸ್ತರಿಗೆ ಪಿಂಚಣಿ 50 ಸಾವಿರ ರೂ.ಗಳಿಗೆ ಹೆಚ್ಚಿಸಲು ಕ್ರಮ
ಆಸಿಡ್ ಸಂತ್ರಸ್ತರಿಗೆ ತ್ವರಿತ ನ್ಯಾಯ ಒದಗಿಸುವ ದೃಷ್ಟಿಯಿಂದ, ಪ್ರಕರಣಗಳ ವಿಚಾರಣೆಯನ್ನು ತ್ವರಿತಗತಿಯಲ್ಲಿ ನಡೆಸಲು ಮತ್ತು ಅವರಿಗೆ ಉಚಿತ ಕಾನೂನು ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಸಂತ್ರಸ್ತರಿಗೆ ಆರ್ಥಿಕ ಸಾಮಾಜಿಕ ಭದ್ರತೆಯ ಅಡಿಯಲ್ಲಿ ಮಾಸಿಕ ಪಿಂಚಣಿ ಸೌಲಭ್ಯವನ್ನೂ ನೀಡಲಾಗುತ್ತಿದೆ. ಪಿಂಚಣಿಯನ್ನು 50 ಸಾವಿರ ರೂ.ಗಳಿಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗುವುದು.
-ಡಾ.ಜಿ.ಪರಮೇಶ್ವರ, ಗೃಹ ಸಚಿವ